ಡೆಂಗಿ ಸಾಂಕ್ರಾಮಿಕ ರೋಗವಾಗಿದ್ದು, ನಿಯಂತ್ರಣ ಕ್ರಮಗಳಲ್ಲಿ ಸಹಕರಿಸದವರ ವಿರುದ್ಧ ದಂಡ ವಿಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಂಡ್ಯ ಜಿಲ್ಲಾಧಿಕಾರಿ ಕುಮಾರ ಎಚ್ಚರಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ್ರಸ್ತುತ 103 ಡೆಂಗಿ ಮತ್ತು 11 ಚಿಕುನ್‌ಗುನ್ಯಾ ಪ್ರಕರಣಗಳು ದಾಖಲಾಗಿದ್ದು, ಹೆಚ್ಚಿನ ಪ್ರಕರಣಗಳು ವಲಸಿಗರಲ್ಲೇ ಕಂಡು ಬರುತ್ತಿವೆ. ಕಬ್ಬು ಕಟ್ಟಾವು ಕಾಲದಲ್ಲಿ ಸುಮಾರು 25 ಸಾವಿರಕ್ಕೂ ಹೆಚ್ಚು ವಲಸಿಗರು ಜಿಲ್ಲೆಗೆ ಆಗಮಿಸಿರುವುದರಿಂದ, ಅವರಿಗೆ ಕುಡಿಯುವ ನೀರು, ಶೌಚಾಲಯ, ಸೊಳ್ಳೆಪರದೆ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಈಗಾಗಲೇ ಸಂಬಂಧಿತ ಕಾರ್ಖಾನೆಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಆರೋಗ್ಯ ಇಲಾಖೆಯ ಅಧಿಕಾರಿಗಳು ವಲಸಿಗರ ವಾಸಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಗತ್ಯ ಸೌಕರ್ಯಗಳನ್ನು ಕಲ್ಪಿಸದ ಕಾರ್ಖಾನೆಗಳ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಬೇಕು ಎಂದು ಅವರು ಸೂಚಿಸಿದರು. ಜೊತೆಗೆ, ಡೆಂಗಿ ಮುಂತಾದ ಸಾಂಕ್ರಾಮಿಕ ರೋಗಗಳು ವ್ಯಾಪಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು, ವಿಶೇಷ ಶಿಬಿರಗಳನ್ನು ಆಯೋಜಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತೆ ಸೂಚಿಸಿದರು.
ವರದಿ:ರಂಜಿತ ರೇವಣ್ಣ ನಾಟನಹಳ್ಳಿ