ರಾಜ್ಯ ಸರ್ಕಾರ ಗೃಹಲಕ್ಷ್ಮಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ಮುಂದಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಫಲಾನುಭವಿಗಳ ಪಟ್ಟಿಯಲ್ಲಿದ್ದ ಕೆಲವರು ಮರಣ ಹೊಂದಿರುವ ಮಾಹಿತಿ ಇದೆ. ಆದರೂ ಅವರ ಖಾತೆಗೆ ಹಣ ಪಾವತಿಯಾಗುತ್ತಿದೆ. ಹೀಗಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೇ ಫಲಾನುಭವಿಗಳ ಪಟ್ಟಿ ಪರಿಶೀಲಿಸಿ, ಪರಿಷ್ಕರಿಸಬೇಕಿದೆ. ನಂತರ ಪರಿಷ್ಕರಿಸಿದ ಪಟ್ಟಿಯನ್ನು ಇಲಾಖೆ ಮತ್ತು ಸಂಬಂಧಪಟ್ಟ ಬ್ಯಾಂಕ್‌ಗಳಿಗೆ ಸಲ್ಲಿಸಬೇಕಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ, ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ.
ಸೆಪ್ಟೆಂಬರ್ 9ರಂದು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ, ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಲಾಗಿದೆ. ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ 1.24 ಕೋಟಿ ಫಲಾನುಭವಿಗಳಿಗೆ, ಮಾಸಿಕ 2000 ರೂಪಾಯಿ ನೀಡಲಾಗುತ್ತಿದೆ. ಅರ್ಹ ಫಲಾನುಭವಿಗಳನ್ನು ಗುರುತಿಸಲು ಆಡಿಟ್ ನಡೆಸಬೇಕು. ಪಂಚಾಯತಿ ಮಟ್ಟದಲ್ಲಿ ಫಲಾನುಭವಿಗಳ ಸೇರ್ಪಡೆ ಮತ್ತು ತೆಗೆದು ಹಾಕುವಿಕೆಯನ್ನು ವ್ಯವಸ್ಥಿತವಾಗಿ ಮಾಡಬೇಕು. ಜಿಎಸ್‌ಟಿ ಪಾವತಿಸಿದವರು ಗೃಹಲಕ್ಷ್ಮೀ ಯೋಜನೆ ಲಾಭ ಪಡೆಯುತ್ತಿರುವ ಬಗ್ಗೆ, ಇರುವ ಗೊಂದಲವನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕಿದೆ. ಜೊತೆಗೆ ಗ್ಯಾರಂಟಿ ಯೋಜನೆಗಳ ಲಾಭವನ್ನು, ಅರ್ಹ ಫಲಾನುಭವಿಗಳಿಗೆ ತಲುಪಿಸಲು ಆಂದೋಲನ ಮಾದರಿಯಲ್ಲಿ ಕಾರ್ಯ ನಿರ್ವಹಿಸಬೇಕೆಂದು, ಸಿದ್ದರಾಮಯ್ಯ ಸೂಚಿಸಿದ್ದಾರೆ.
ಅನರ್ಹ ಬಿಪಿಎಲ್ ಕಾರ್ಡ್ ಹೊಂದಿರುವವರ ವಿರುದ್ಧ ಕಠಿಣ ಕ್ರಮಕ್ಕೆ, ಸಿದ್ದರಾಮಯ್ಯ ಸೂಚಿಸಿದ್ದಾರೆ. ಅನರ್ಹ ಕಾರ್ಡ್‌ದಾರರನ್ನು ಗುರುತಿಸಿ ರದ್ದು ಮಾಡಿ, ಕ್ರಮ ಜರುಗಿಸಿ. ಮಾನದಂಡಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಿ. ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಗಟ್ಟಲು, ಅಕ್ಕಿಯ ಬದಲು ಪ್ರದೇಶವಾರು ಇತರೆ ಧಾನ್ಯಗಳನ್ನು ನೀಡುವ ಬಗ್ಗೆ ಪರಿಶೀಲನೆ ನಡೆಸಬೇಕೆಂದು, ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ.