ಧರ್ಮಸ್ಥಳ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ತಿಮರೋಡಿಯನ್ನು ದಕ್ಷಿಣ ಕನ್ನಡದಿಂದ ಗಡಿಪಾರು ಮಾಡಿದ್ದಾರೆ ಅನ್ನೋ ಸುದ್ದಿ ಕೇಳಿ ಬರ್ತಾಯಿದೆ. ಹೌದು ಧರ್ಮಸ್ಥಳದ ಬುರುಡೆ ಪ್ರಕರಣ ಮತ್ತು ಸೌಜನ್ಯ ಹೋರಾಟಗಳಲ್ಲಿ ಮುಂಚೂಣಿಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಕಾಣಿಸಿಕೊಂಡಿದ್ದರು. ಸದ್ಯ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಲು ಆದೇಶ ಹೊರಡಿಸಲಾಗಿದೆ.
ಸೆಪ್ಟೆಂಬರ್ 20ರಂದೇ ಪುತ್ತೂರು ಸಹಾಯಕ ಆಯುಕ್ತರು ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ. ಮಾಹಿತಿಯ ಪ್ರಕಾರ ಒಂದು ವರ್ಷದ ಅವಧಿಗೆ ಈ ಗಡಿಪಾರು ನಡೆಯಲಿದೆ.
ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಸುಮಾರು 32 ವಿವಿಧ ಪ್ರಕರಣಗಳು ದಾಖಲಾಗಿದೆ. ಅವರನ್ನು ಗಡಿಪಾರು ಮಾಡುವಂತೆ ಆಗ್ರಹಗಳು ವ್ಯಕ್ತವಾಗಿದ್ದವು. ಆದರೂ, ಗಡಿಪಾರು ಪ್ರಕ್ರಿಯೆ ಇನ್ನೂ ಪೂರ್ಣಗೊಂಡಿಲ್ಲ. ಪೋಲಿಸರು ಗಡಿಪಾರು ನೋಟಿಸ್ ಖುದ್ದು ಮಹೇಶ್ ಶೆಟ್ಟಿ ತಿಮರೋಡಿಗೆ ನೀಡಿದ ನಂತರ ಮಾತ್ರ ಕ್ರಮ ಕೈಗೊಳ್ಳಲಾಗುವುದು.
ಮಹೇಶ್ ಶೆಟ್ಟಿ ತಿಮರೋಡಿ ಹಿಂದೂ ಜಾಗರಣ ವೇದಿಕೆಯ ರಾಜ್ಯ ಮತ್ತು ರಾಷ್ಟ್ರೀಯ ಹೋರಾಟಗಳಲ್ಲಿ ಗುರುತಿಸಿಕೊಂಡಿದ್ದಾರೆ. ಸೌಜನ್ಯ ಪರ ಹೋರಾಟ ಮತ್ತು ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಧರ್ಮಸ್ಥಳ ಪ್ರಕರಣ ಸಂಬಂಧ ಎಸ್‌ಐಟಿ ಅಧಿಕಾರಿಗಳು ಇವರ ಮನೆ ಮೇಲೆ ದಾಳಿ ನಡೆಸಿದ್ದು, ಶಸ್ತ್ರಾಸ್ತ್ರಗಳು ಪತ್ತೆಯಾಗಿದ್ದವು.
ಅಲ್ಲದೇ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಪ್ರಕರಣಕ್ಕೂ ಅವರು ಸಂಬಂಧಿಸಿದ್ದಾರೆ. ಸದ್ಯ, ಮಹೇಶ್ ಶೆಟ್ಟಿ ತಿಮರೋಡಿಯ ವಿರುದ್ಧ ಇರುವ ಎಲ್ಲಾ ಪ್ರಕರಣಗಳು ವಿಚಾರಣೆಯ ಹಂತದಲ್ಲಿವೆ. ಸದ್ಯ ಒಂದು ವರ್ಷ ಅವಧಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಯಾವ ರೀತಿ ಕ್ರಮ ಕೈಗೊಳ್ಳಲಾಗತ್ತೆ ಅನ್ನೋದನ್ನ ಕಾದುನೋಡಬೇಕಿದೆ.
ವರದಿ : ಲಾವಣ್ಯ ಅನಿಗೋಳ