Dharwad News: 3 ತಿಂಗಳಲ್ಲಿ ಕಾಂಗ್ರೆಸ್-ಬಿಜೆಪಿಯಲ್ಲಿ ಭಾರೀ ಬದಲಾವಣೆ.?: ಕೆ.ಎಸ್.ಈಶ್ವರಪ್ಪ

Dharwad News: ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ಇನ್ನೂ ಮೂರು ತಿಂಗಳ ಅವಧಿಯಲ್ಲಿ ಭಾರೀ ಬದಲಾವಣೆಯಾಗಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ತಮ್ಮ ಘರ್‌ ವಾಪಸಿ ವಿಚಾರಕ್ಕೂ ಕಾದು ನೋಡಿ ಎಂದಷ್ಟೇ ಉತ್ತರಿಸಿದ್ದಾರೆ. ಇದೇ ವೇಳೆ ಸಚಿವ ಬಿ. ನಾಗೇಂದ್ರ ರಾಜೀನಾಮೆ ವಿಚಾರವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಡಬಲ್ ಸ್ಟ್ಯಾಂಡರ್ಡ್ ಆರೋಪ ಮಾಡಿದ್ದಾರೆ.

ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ಮುಂದಿನ ಮೂರ್ನಾಲ್ಕು ತಿಂಗಳಲ್ಲಿ ಭಾರೀ ಬದಲಾವಣೆಯಾಗಲಿದೆ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಬಿಜೆಪಿಯಲ್ಲಿ ಯಾವ ರೀತಿಯ ಬದಲಾವಣೆ ಆಗಲಿದೆ ಎಂಬುದನ್ನು ಹೇಳಲು ಸಾಧ್ಯವಿಲ್ಲ. ತಾವು ಸದ್ಯ ಬಿಜೆಪಿಯಿಂದ ಹೊರಗಡೆ ಇರುವುದಾಗಿ ಸ್ಪಷ್ಟಪಡಿಸಿದ್ದಾರೆ.

ಇನ್ನು ಬಿಜೆಪಿಗೆ ಮರಳುವ ವಿಚಾರವಾಗಿ ಕೇಳಿದ ಪ್ರಶ್ನೆಗೆ ಈಶ್ವರಪ್ಪ ಕಾದು ನೋಡಿ ಎಂದು ಉತ್ತರಿಸಿದ್ದಾರೆ. ಈ ಮೂಲಕ ತಮ್ಮ ಘರ್‌ ವಾಪಸಿ ಬಗ್ಗೆ ಯಾವುದೇ ಸ್ಪಷ್ಟ ನಿರ್ಧಾರವನ್ನು ಬಹಿರಂಗಪಡಿಸದೆ ಕುತೂಹಲ ಮೂಡಿಸಿದ್ದಾರೆ.

ಇತ್ತ ಸಚಿವ ಬಿ. ನಾಗೇಂದ್ರ ರಾಜೀನಾಮೆ ವಿಚಾರವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಮೇಲೆ ಆರೋಪ ಬಂದಾಗ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದರು. ಕೆ.ಜೆ. ಜಾರ್ಜ್ ಅವರ ಮೇಲೂ ಆರೋಪ ಬಂದಾಗ ರಾಜೀನಾಮೆ ಪಡೆಯಲಾಗಿತ್ತು. ತನಿಖೆಯಲ್ಲಿ ನಿರ್ದೋಷಿ ಎಂದು ಸಾಬೀತಾದ ಬಳಿಕ ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿತ್ತು ಎಂದು ಹೇಳಿದ್ದಾರೆ.

ತಮ್ಮ ಮೇಲೂ ಆರೋಪ ಬಂದ ಸಂದರ್ಭದಲ್ಲಿ ತಾವು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೆ. ತನಿಖೆ ಬಳಿಕ ತಮ್ಮ ವಿರುದ್ಧ ಯಾವುದೇ ಆರೋಪ ಸಾಬೀತಾಗಲಿಲ್ಲ ಎಂದು ಈಶ್ವರಪ್ಪ ಹೇಳಿದ್ದಾರೆ. ಇದೇ ಮಾನದಂಡವನ್ನು ಬಿ. ನಾಗೇಂದ್ರ ವಿಚಾರದಲ್ಲೂ ಅನುಸರಿಸಬೇಕು ಎಂದು ಆಗ್ರಹಿಸಿದ್ದಾರೆ.

ಬಿ. ನಾಗೇಂದ್ರ ಅವರ ವಿರುದ್ಧ ಆರೋಪ ಹಾಗೂ ದಾಖಲೆಗಳಿವೆ. ಹೀಗಾಗಿ ಮೊದಲು ಅವರ ರಾಜೀನಾಮೆ ಪಡೆಯಬೇಕು. ಬಳಿಕ ತನಿಖೆ ನಡೆಸಿ ಅವರು ನಿಷ್ಕಳಂಕರೆಂದು ಸಾಬೀತಾದರೆ ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲಿ ಎಂದು ಈಶ್ವರಪ್ಪ ಒತ್ತಾಯಿಸಿದ್ದಾರೆ. ಇದೇ ವೇಳೆ ಡಿ.ಕೆ. ಶಿವಕುಮಾರ್ ಅವರು ಡಬಲ್ ಸ್ಟ್ಯಾಂಡರ್ಡ್ ಅನುಸರಿಸಬಾರದು ಎಂದು ವಾಗ್ದಾಳಿ ನಡೆಸಿದ್ದಾರೆ.

About The Author