ಬೆಂಗಳೂರು: ಗುತ್ತಿಗೆದಾರ ಸಂತೋಷ್ ಸಾವಿಗೆ ನ್ಯಾಯ ಸಿಗಬೇಕು. ಈ ಪ್ರಕರಣಕ್ಕೆ ಕಾರಣವಾದಂತ ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅಲ್ಲಿಯವರೆಗೆ ನಾವು ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸೋದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಘೋಷಿಸಿದ್ದಾರೆ.
ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಿಂದ ಗುತ್ತಿಗೆದಾರ ಸಂತೋಷ್ ಸಾವಿಗೆ ನ್ಯಾಯ ಒದಗಿಸಿಕೊಡುವ ನಿಟ್ಟಿನಲ್ಲಿ ಪ್ರತಿಭಟನೆ ಇಲ್ಲಿಗೆ ನಿಲ್ಲಿಸೋದಿಲ್ಲ. ಅವರ ಸಾವಿಗೆ ನ್ಯಾಯಸಿಗಬೇಕು. ಸಚಿವ ಈಶ್ವರಪ್ಪ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅಲ್ಲಿಯವರೆಗೆ ಕಾಂಗ್ರೆಸ್ ಪಕ್ಷದಿಂದ ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ ನಡೆಸೋದಕ್ಕೆ ನಿರ್ಧರಿಸಲಾಗಿರೋದಾಗಿ ತಿಳಿಸಿದರು.
ಅಂದಹಾಗೇ ಇಂದು ಸಿಎಂ ಬಸವರಾಜ ಬೊಮ್ಮಾಯಿ ಮನೆಗೆ ಮುತ್ತಿಗೆ ಹಾಕುವಂತ ಕಾರ್ಯಕ್ರಮವನ್ನು ಕಾಂಗ್ರೆಸ್ ನಿಂದ ಹಮ್ಮಿಕೊಳ್ಳಲಾಗಿತ್ತು. ಕಾಂಗ್ರೆಸ್ ಭವನದಿಂದ ಹೊರಟಂತ ವಿಪಕ್ಷ ನಾಯಕ ಸಿದ್ಧರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ಮುಂಖಂಡರನ್ನು ಪೊಲೀಸರು ಅರ್ಧದಲ್ಲಿಯೇ ವಶಕ್ಕೆ ಪಡೆದಿದ್ದರು. ಈ ಬಳಿಕ ಇದೀಗ ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿಗೆ ಕಾಂಗ್ರೆಸ್ ನಿಂದ ನಿರ್ಧಾರ ಕೈಗೊಳ್ಳಲಾಗಿದೆ.



