ರಾಜ್ಯ ರಾಜಕಾರಣದಲ್ಲಿ ಸಿಎಂ ಕುರ್ಚಿ ಪೈಪೋಟಿ ಮುಂದುವರೆದಿರುವ ನಡುವೆಯೇ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ಆಗಮಿಸಿದ್ದಾರೆ. ದೆಹಲಿ ಭೇಟಿ ವೇಳೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗುತ್ತೀರಾ ಎಂಬ ಪ್ರಶ್ನೆಗೆ ಡಿಕೆ.ಶಿವಕುಮಾರ್ ಸ್ಪಷ್ಟ ಉತ್ತರ ನೀಡದೇ ಮೌನ ವಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ.ಶಿವಕುಮಾರ್ ಅವರು, ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ತೊಂದರೆ ಇರುವುದರಿಂದ, ತಾವು ಮತ್ತು ತಮ್ಮ ಕಿರಿಯ ಸಹೋದರರು ಕಾನೂನು ತಜ್ಞರನ್ನು ಭೇಟಿ ಮಾಡುವ ಉದ್ದೇಶದಿಂದ ದೆಹಲಿಗೆ ಬಂದಿದ್ದೇವೆ ಎಂದು ತಿಳಿಸಿದ್ದಾರೆ.
ಇದೇ ವೇಳೆ, “ಸೋನಿಯಾ ಗಾಂಧಿ ಅವರು ಊಟಕ್ಕೆ ಆಹ್ವಾನಿಸಿದ್ದಾರೆ. ನಾನು ಹೋಗುತ್ತಿದ್ದೇನೆ. ಅಲ್ಲಿ ಎಲ್ಲರೂ ಸಿಗುತ್ತಾರೆ, ಮಾತನಾಡುತ್ತೇನೆ” ಎಂದು ಡಿಕೆ.ಶಿವಕುಮಾರ್ ಹೇಳಿದ್ದಾರೆ. ಆದರೆ ಸೋನಿಯಾ ಗಾಂಧಿ ಅವರನ್ನು ಪ್ರತ್ಯೇಕವಾಗಿ ಭೇಟಿಯಾಗುತ್ತೀರಾ ಎಂಬ ವಿಚಾರದಲ್ಲಿ ಅವರು ಯಾವುದೇ ಸ್ಪಷ್ಟನೆ ನೀಡಿಲ್ಲ.
ಈ ನಡುವೆ, ‘ವೋಟ್ ಚೋರಿ’ ವಿರುದ್ಧ ದೆಹಲಿಯಲ್ಲಿ ನಡೆಯಲಿರುವ ಪ್ರತಿಭಟನೆ ಹಿನ್ನೆಲೆ, ಉಪಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಇಬ್ಬರೂ ದೆಹಲಿಗೆ ತೆರಳಿರುವುದು ರಾಜ್ಯ ರಾಜಕೀಯ ವಲಯದಲ್ಲಿ ಮತ್ತಷ್ಟು ಕುತೂಹಲ ಮೂಡಿಸಿದೆ.
ವರದಿ: ರಂಜಿತ ರೇವಣ್ಣ ನಾಟನಹಳ್ಳಿ




