Sunday, October 26, 2025

Latest Posts

ಅಂಗೈಯಲ್ಲಿ ‘ಸಾಕ್ಷಿ’ ಬರೆದು ವೈದ್ಯೆ ಆತ್ಮಹತ್ಯೆ!

- Advertisement -

ಮಹಾರಾಷ್ಟ್ರ : ಸತಾರಾ ಜಿಲ್ಲೆಯಲ್ಲಿ ವೈದ್ಯೆಯೊಬ್ಬಳ ಮೇಲೆ ನಡೆದ ಅತ್ಯಾಚಾರ ಹಾಗೂ ಆಕೆಯ ಆತ್ಮಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಈ ಪ್ರಕರಣದ ಹಿನ್ನೆಲೆಯಲ್ಲಿ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಗೋಪಾಲ್ ಬದನೆ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಬ್-ಇನ್ಸ್‌ಪೆಕ್ಟರ್ ಗೋಪಾಲ್ ಬದನೆ ಹಾಗೂ ಸಾಫ್ಟ್‌ವೇರ್ ಎಂಜಿನಿಯರ್ ಪ್ರಶಾಂತ್ ಬಂಕರ್ ಅವರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಹಾಗೂ ಅತ್ಯಾಚಾರ ಆರೋಪದಡಿ ಪ್ರಕರಣ ದಾಖಲಾಗಿದೆ. ಪ್ರಾಥಮಿಕ ವಿಚಾರಣೆಯ ಬಳಿಕ ಸಬ್-ಇನ್ಸ್‌ಪೆಕ್ಟರ್ ಗೋಪಾಲ್ ತಲೆಮರೆಸಿಕೊಂಡಿದ್ದರು. ನಂತರ ಅವರು ಫಾಲ್ಟನ್ ಗ್ರಾಮೀಣ ಪೊಲೀಸ್ ಠಾಣೆಗೆ ಶರಣಾಗಿ, ಬಂಧನಕ್ಕೊಳಗಾದರು ಎಂದು ಮೂಲಗಳು ತಿಳಿಸಿವೆ.

28 ವರ್ಷದ ಮೃತ ವೈದ್ಯೆ ಮಹಾರಾಷ್ಟ್ರದ ಬೀಡ್ ಜಿಲ್ಲೆಯ ನಿವಾಸಿ. ಸತಾರಾ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಗುರುವಾರ ರಾತ್ರಿ ಫಾಲ್ಟನ್ ಪಟ್ಟಣದ ಹೋಟೆಲ್ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಆಕೆಯ ಶವ ಪತ್ತೆಯಾಗಿದೆ. ಸಬ್‌ಇನ್ಸ್‌ಪೆಕ್ಟರ್ ಗೋಪಾಲ್ ಬದನೆ ತಮ್ಮ ಮೇಲೆ ಹಲವಾರು ಬಾರಿ ಅತ್ಯಾಚಾರ ಎಸಗಿದ್ದರೆಂದು ಪ್ರಶಾಂತ್ ಬಂಕರ್ ಮಾನಸಿಕ ಕಿರುಕುಳ ನೀಡುತ್ತಿದ್ದರೆಂದು ವೈದ್ಯೆ ಬರೆದುಕೊಂಡಿದ್ದಾರೆ.

ತನಿಖೆಯ ಪ್ರಾರಂಭಿಕ ಹಂತದಲ್ಲೇ ಬದನೆ ಹೆಸರು ಹೊರಬಂದಿದ್ದು, ಅವರನ್ನು ತಕ್ಷಣ ಅಮಾನತುಗೊಳಿಸಲಾಗಿದೆ ಎಂದು ಪೊಲೀಸ್ ಇಲಾಖೆಯ ವಕ್ತಾರರು ತಿಳಿಸಿದ್ದಾರೆ. ಮೃತರ ಶವವನ್ನು ಶುಕ್ರವಾರ ರಾತ್ರಿ ಬೀಡ್ ಜಿಲ್ಲೆಯ ವಡ್ವಾನಿ ತಹಸಿಲ್‌ನಲ್ಲಿರುವ ಪೂರ್ವಜರ ಮನೆಯಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು. ಈ ವೇಳೆ ಕುಟುಂಬದ ಸದಸ್ಯರು ಆರೋಪಿಗಳಿಗೆ ಕಠಿಣ ಶಿಕ್ಷೆ, ಮರಣದಂಡನೆ ವಿಧಿಸುವಂತೆ ಆಗ್ರಹಿಸಿದರು.

ವರದಿ : ಲಾವಣ್ಯ ಅನಿಗೋಳ

- Advertisement -

Latest Posts

Don't Miss