ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಮೈ ಕೊರೆಯುವ ಚಳಿ ಮುಂದುವರಿದಿದೆ. ಚಳಿಯಿಂದ ಜನರು ನಡುಗುತ್ತಿರುವ ನಡುವೆಯೇ, ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಹವಾಮಾನದಲ್ಲಿ ಮಹತ್ವದ ಬದಲಾವಣೆ ಸಂಭವಿಸುವ ಸಾಧ್ಯತೆ ಇದೆ. ಮುಂದಿನ ಮೂರು ದಿನಗಳ ಅವಧಿಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಆರ್ಭಟ ಶುರುವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಾಮಾನ್ಯವಾಗಿ ಸಂಕ್ರಾಂತಿ ಸಮಯದಲ್ಲಿ ಚಳಿ ತೀವ್ರವಾಗಿದ್ದು, ಶಿವರಾತ್ರಿಯವರೆಗೂ ಚಳಿ ಮುಂದುವರಿಯುವುದು ವಾಡಿಕೆ. ಆ ನಂತರ ಕ್ರಮೇಣ ಬೇಸಿಗೆ ಆರಂಭವಾಗುತ್ತದೆ. ಆದರೆ ಈ ವರ್ಷ ಹವಾಮಾನದಲ್ಲಿ ಅಸಾಮಾನ್ಯ ಬದಲಾವಣೆಗಳು ಕಂಡುಬರುತ್ತಿವೆ. ಜನವರಿ 5ರ ಹವಾಮಾನ ವರದಿ ಪ್ರಕಾರ, ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವೆಡೆ ಮೈ ಕೊರೆಯುವ ಚಳಿ ಮುಂದುವರಿದಿದೆ.
ಇನ್ನು ಜನವರಿ 8 ದಿಂದ ರಾಜ್ಯದಲ್ಲಿ ಮಳೆ ಆಗಲಿದೆ. ಆಗ್ನೇಯ ಅರೇಬಿಯನ್ ಸಮುದ್ರ ಮತ್ತು ಪಕ್ಕದ ಕೇರಳ ಕರಾವಳಿಯಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಮೇಲ್ಭಾಗದ ವಾಯು ಚಂಡಮಾರುತದ ಪರಿಚಲನೆ ಮುಂದುವರಿದಿದೆ. ಆಗ್ನೇಯ ಬಂಗಾಳ ಕೊಲ್ಲಿ ಮತ್ತು ಪಕ್ಕದ ನೈಋತ್ಯ ಬಂಗಾಳ ಕೊಲ್ಲಿ ಹಾಗೂ ಹಿಂದೂ ಮಹಾಸಾಗರದ ಮೇಲೆ ಸರಾಸರಿ ಸಮುದ್ರ ಮಟ್ಟದಿಂದ 5.8 ಕಿ.ಮೀ ಎತ್ತರದಲ್ಲಿ ವಾಯು ಚಂಡಮಾರುತದ ಪರಿಚಲನೆ ಮುಂದುವರಿದಿದೆ.
ಹಾಗಾಗಿ ಮಳೆ ಆಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಜನವರಿ 8ರಿಂದ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ. ಜನವರಿ 9 ಮತ್ತು ಜನವರಿ 10ರಂದು ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ ಜೋರಾಗಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ವರದಿ : ಲಾವಣ್ಯ ಅನಿಗೋಳ




