ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯ ರಾಜಕಾರಣಕ್ಕೆ ಮರಳುವುದು ಖಚಿತ ಎಂದು ಸಂಸದ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಅಲ್ಲದೇ, 2028ರ ವೇಳೆಗೆ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಮುಂದಿನ 20 ವರ್ಷಗಳ ಕಾಲ ಎನ್‌ಡಿಎ ಸರ್ಕಾರವೇ ಅಧಿಕಾರದಲ್ಲಿರಲಿದೆ ಎಂದರು. ಕಾಂಗ್ರೆಸ್ ಭವಿಷ್ಯದ ಬಗ್ಗೆ ಮಾತನಾಡಿದ ಡಾ. ಸುಧಾಕರ್, ಕಾಂಗ್ರೆಸ್ ಒಂದು ಪಕ್ಷವಾಗಿ ಎಲ್ಲಿರಲಿದೆ ಎಂಬುದನ್ನು ಅವರದೇ ನಾಯಕರು ಹೇಳಬೇಕು ಎಂದು ವ್ಯಂಗ್ಯವಾಡಿದರು.
ನಾನು ಸಚಿವನಾಗಿದ್ದ ಅವಧಿಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ 22 ಸಾವಿರ ನಿವೇಶನಗಳನ್ನು ಬಡವರಿಗೆ ಹಂಚಿಕೆ ಮಾಡಲಾಗಿತ್ತು. ಈ ಯೋಜನೆ ರಾಜ್ಯದಲ್ಲಿಯೇ ಮಾದರಿಯಾಗಿ ಗುರುತಿಸಿಕೊಂಡಿತ್ತು. ಆದರೆ ನಂತರ ಬಂದ ಸರ್ಕಾರ ಈ ಯೋಜನೆಯನ್ನು ನಿರ್ಲಕ್ಷ್ಯ ಮಾಡಿತು ಎಂದು ಆರೋಪಿಸಿದರು.
2028ರಲ್ಲಿ ಬಿಜೆಪಿ ಸರ್ಕಾರ ಬಂದ ಬಳಿಕ, ಈ ನಿವೇಶನಗಳನ್ನು ಸರ್ವಾಂಗೀಣವಾಗಿ ಅಭಿವೃದ್ಧಿಪಡಿಸಿ 22 ಸಾವಿರ ಮನೆಗಳನ್ನು ಬಡವರಿಗೆ ನಿರ್ಮಿಸಿ ನೀಡಲಾಗುವುದು. ಹಾಗೆ ಮಾಡದಿದ್ದರೆ ನಾನು ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದು ಡಾ. ಸುಧಾಕರ್ ಸವಾಲು ಹಾಕಿದರು.
ಇನ್ನು, ನಾವು ಆರಂಭಿಸಿದ್ದ ಅಭಿವೃದ್ಧಿ ಕಾರ್ಯಗಳನ್ನು ಈಗಿನ ಸರ್ಕಾರ ತಮ್ಮದೇ ಸಾಧನೆಯಂತೆ ಬಿಂಬಿಸಿಕೊಳ್ಳಲು ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.
ವರದಿ : ಲಾವಣ್ಯ ಅನಿಗೋಳ




