ಶಿಕ್ಷಣ ಸಚಿವ ಮಧು ನೀಡಿದ್ರು PUC ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌ !

ಎಲ್‌ಕೆಜಿಯಿಂದ ಎಸ್‌ಎಸ್‌ಎಲ್‌ಸಿವರೆಗೆ ಸರ್ಕಾರಿ ಮತ್ತು ಅನುದಾನಿತ ಶಾಲೆ–ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಎಲ್ಲಾ ಸೌಲಭ್ಯಗಳನ್ನು ಪದವಿ ಪೂರ್ವ ಶಿಕ್ಷಣದವರೆಗೂ ವಿಸ್ತರಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ನೋಟ್‌ಪುಸ್ತಕ, ಪಠ್ಯಪುಸ್ತಕ, ಮಧ್ಯಾಹ್ನದ ಬಿಸಿಯೂಟ, ಶೂ, ಸಾಕ್ಸ್, ಹಾಲು, ಮೊಟ್ಟೆ ಸೇರಿದಂತೆ ಮಕ್ಕಳಿಗೆ ದೊರೆಯುತ್ತಿರುವ ಸೌಲಭ್ಯಗಳು ಇನ್ನು ಮುಂದೆ ಪಪೂ ಶಿಕ್ಷಣದವರೆಗೂ ಲಭ್ಯವಾಗಲಿವೆ ಎಂದು ಅವರು ಸ್ಪಷ್ಟಪಡಿಸಿದರು.

10ನೇ ತರಗತಿಯಲ್ಲಿ ಶೇ.100ರಷ್ಟು ಫಲಿತಾಂಶ ದಾಖಲಿಸಿದ ಶಾಲೆಗಳ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಏರ್ಪಡಿಸಲಾಗಿದ್ದ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಮುಂದಿನ ಶೈಕ್ಷಣಿಕ ಸಾಲಿನ ಆರಂಭದೊಳಗೆ ರಾಜ್ಯದಲ್ಲಿರುವ 12 ಸಾವಿರ ಶಿಕ್ಷಕರ ಕೊರತೆಯನ್ನು ನೀಗಿಸಲು ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗುವುದು ಎಂದರು.

ರಾಜ್ಯದಲ್ಲಿ 2026ರ ಜನವರಿ ಅಂತ್ಯದೊಳಗೆ 900 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು. ಗುಣಾತ್ಮಕ ಶಿಕ್ಷಣ ಹಾಗೂ ರಚನಾತ್ಮಕ ಕಲಿಕಾ ವಾತಾವರಣ ನಿರ್ಮಾಣಕ್ಕೆ ಸಹಕಾರಿಯಾಗುವಂತೆ ಪ್ರತಿ ಶಾಲೆಯಲ್ಲೂ ಆಡಳಿತ ಮಂಡಳಿ ರಚಿಸುವ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಇದಲ್ಲದೆ, ಶಾಲೆಗಳ ನೋಂದಣಿ ಮತ್ತು ನವೀಕರಣ ಪ್ರಕ್ರಿಯೆಯನ್ನು ಇನ್ನಷ್ಟು ಸರಳಗೊಳಿಸುವ ಉದ್ದೇಶದಿಂದ ಸದನ ಸಮಿತಿ ರಚಿಸಲು ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು. ರಾಜ್ಯದ ಮಕ್ಕಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ದ್ವೇಷ ಭಾಷಣ ತಡೆ ಕಾಯ್ದೆಯನ್ನು ಜಾರಿಗೆ ತರಲಾಗುತ್ತಿದೆ. ದ್ವೇಷ ಭಾಷಣ ತಡೆ ಮಸೂದೆಯನ್ನು ನಾನು ಸ್ವಾಗತಿಸುತ್ತೇನೆ ಎಂದು ಮಧು ಬಂಗಾರಪ್ಪ ಹೇಳಿದರು.

ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಷಿಯಲ್ ಮೀಡಿಯಾದಲ್ಲಿ ಬಂದಿರುವ ಮಾಹಿತಿಯನ್ನೇ ಆಧಾರ ಮಾಡಿಕೊಂಡು ಕೆಲವರು ಸದನದಲ್ಲಿ ಪ್ರಶ್ನೆ ಮಾಡುತ್ತಾರೆ. ಆದರೆ, ಸೋಷಿಯಲ್ ಮೀಡಿಯಾದಲ್ಲಿ ಬರುವ ಎಲ್ಲವೂ ಸತ್ಯವೇ ಎಂಬುದನ್ನು ಮೊದಲು ಅರಿಯಬೇಕು ಎಂದು ಹೇಳಿದರು.

ಕರಾವಳಿ ಭಾಗದ ಕೆಲ ಬಿಜೆಪಿ ಮುಖಂಡರು ಸೇರಿದಂತೆ ಹಲವು ನಾಯಕರು ದ್ವೇಷ ಭಾಷಣ ಮಾಡಿಕೊಂಡೇ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಜೊತೆಗೆ, ನರೇಗಾ ಯೋಜನೆಯಲ್ಲಿ ಮಹಾತ್ಮ ಗಾಂಧಿ ಅವರ ಹೆಸರನ್ನು ಕೈಬಿಟ್ಟಿರುವುದು ಅತ್ಯಂತ ನೀಚ ಕೆಲಸ ಎಂದು ಕಿಡಿಕಾರಿದರು. ಗಾಂಧೀಜಿ ದುಡಿಯುವ ಕೈಗೆ ಕೆಲಸ ಕೊಡಬೇಕು ಎಂದು ಹೇಳಿದ್ದಾರೆ. ಆದರೆ, ಬಿಜೆಪಿ ಅವರ ಹೆಸರನ್ನೇ ನರೇಗಾ ಯೋಜನೆಯಿಂದ ಕೈಬಿಟ್ಟಿದೆ ಎಂದು ಸಚಿವ ಮಧು ಬಂಗಾರಪ್ಪ ವಾಗ್ದಾಳಿ ನಡೆಸಿದರು.

ವರದಿ: ರಂಜಿತ ರೇವಣ್ಣ ನಾಟನಹಳ್ಳಿ

About The Author