Mandya News: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿ ಫಾರಂ ನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಲಾಗಿದೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಹೇಳಿದರು.
ಇಂದು ಕೃಷಿ ಮತ್ತು ತೋಟಗಾರಿಕೆ ಇಲಾಖೆ, ಪಶು ಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳು ಜಲಾನಯನ ಅಭಿವೃದ್ಧಿ ಇಲಾಖೆ, ರೇಷ್ಮೆ, ಅರಣ್ಯ, ಮೀನುಗಾರಿಕೆ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ನಬಾರ್ಡ್ ಇವರುಗಳ ಸಂಯುಕ್ತಾಶ್ರಯದಲ್ಲಿ ನಗರದ ವಿ.ಸಿ ಫಾರಂ ಆವರಣದಲ್ಲಿ ಆಯೋಜಿಸಲಾಗಿದ್ದ “ಕೃಷಿ ಮೇಳ 2025” ಸಮಗ್ರ ಕೃಷಿಯಿಂದ ಸುಸ್ಥಿರತೆ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಪ್ರತಿ ವರ್ಷ ವಿ.ಸಿ ಫಾರಂ ನಲ್ಲಿ ಕೃಷಿ ಮೇಳ ಆಯೋಜನೆ ಮಾಡಿಕೊಂಡು ಬರಲಾಗುತ್ತಿದೆ ಸದರಿ ವರ್ಷ ಮಂಡ್ಯ ವಿಶ್ವವಿದ್ಯಾಲಯ ಸ್ಥಾಪನೆಯಾದ ನಂತರ ಮೊದಲ ಬೃಹತ್ ಕೃಷಿ ಮೇಳವನ್ನು ಆಯೋಜಿಸಲಾಗಿದೆ. ಕೃಷಿ ಮೇಳ 2025 ರಲ್ಲಿ ಹೆಚ್ಚಿನ ಕೃಷಿ ತಳಿಗಳು, ತಂತ್ರಜ್ಞಾನಗಳನ್ನು ಆಧುನಿಕ ಯಂತ್ರೋಪಕರಣಗಳನ್ನು ಮೇಳದಲ್ಲಿ ಇರಿಸಲಾಗಿದೆ ಎಂದು ಹೇಳಿದರು.
ಬೆಂಗಳೂರು ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಆಯೋಜಿಸಲಾಗಿದ್ದ ಕೃಷಿ ಮೇಳದಲ್ಲಿ ಸುಮಾರು 50 ಲಕ್ಷಕ್ಕೂ ಹೆಚ್ಚು ಜನ ಭಾಗಿಯಾಗಿ ಯಶಸ್ವಿಗೊಳಿಸಿದರು. ಮುಂದಿನ ದಿನಗಳಲ್ಲಿ ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯ ಕೃಷಿ ಮೇಳದಲ್ಲಿ ದೊಡ್ಡ ಮಟ್ಟದಲ್ಲಿ ಜನರು ಭಾಗಿಯಾಗುತ್ತಾರೆ ಎಂದು ಹೇಳಿದರು.
1939 ರಲ್ಲಿ ಮೊದಲು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು 630 ಎಕ್ಕರೆ ಜಾಗದಲ್ಲಿ ಮಂಡ್ಯದಲ್ಲಿ ಕೃಷಿ ವಿಜ್ಞಾನಿಗಳ ಸಂಶೋಧನಾ ಕೇಂದ್ರವನ್ನು ತೆರೆದರು. ನಂತರ ರಾಜ್ಯದ 4 ಭಾಗದಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಲಾಯಿತು. ರಾಜ್ಯದ ಎಲ್ಲಾ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಉತ್ತಮ ಕೊಡುಗೆ ಹಾಗೂ ಕಾರ್ಯ ಮಾಡುತ್ತ ಮುಂದೆ ಸಾಗುತ್ತಿವೆ ಎಂದು ಅಭಿಪ್ರಾಯಪಟ್ಟರು.
ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ರಾಜ್ಯದ 5 ನೇ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯವಾಗಿ ಹೊರಹೊಮ್ಮಿದೆ. ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಸ್ಥಾಪನೆಯಾದ. ಮೊದಲ ವರ್ಷದಲ್ಲೇ ಯು.ಜಿ.ಸಿ ಮಾನ್ಯತೆ ಪಡೆದಿದೆ. ಶಿವಮೊಗ್ಗ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯಕ್ಕೆ 2008 ರಲ್ಲಿ ಅನುಮತಿ ದೊರೆತಿತ್ತು ಆದರೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ 2013 ರ ಅವಧಿಯಲ್ಲಿ ಶಿವಮೊಗ್ಗ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಲಾಯಿತು ಎಂದು ಹೇಳಿದರು.
ಬೆಳಗಾವಿಯಲ್ಲಿ ಆದ ಬೆಳೆ ನಾಶಕ್ಕೆ ಎನ್ ಡಿ ಆರ್ ಎಫ್ ಪರಿಹಾರದ ಮೊತ್ತದ ಜೊತೆಗೆ ರಾಜ್ಯ ಸರ್ಕಾರ ಪರಿಹಾರವನ್ನು ನೀಡಿತು. ರಾಜ್ಯ ಕಬ್ಬು ಬೆಳೆಗಾರರ ಆರ್ಥಿಕ ಅಭಿವೃದ್ಧಿಗಾಗಿ ಟನ್ ಕಬ್ಬಿಗೆ ರೂ.50 ಅನ್ನು ಸರ್ಕಾರ ನೀಡುತ್ತಿದೆ. ರಾಜ್ಯ ಸರ್ಕಾರ ಬಡವರು, ರೈತರು, ಶ್ರಮಿಕರು, ಮಹಿಳೆಯರು ಮತ್ತು ಶೋಷಿತ ಸಮುದಾಯದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ ಎಂದರು.
ರಾಜ್ಯ ಸರ್ಕಾರ ರಾಜ್ಯದ ಜನರನ್ನು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸದೃಢರನ್ನಾಗಿ ಮಾಡಲು ಅನೇಕ ಯೋಜನೆಗಳನ್ನು ನೀಡಿಕೊಂಡು ಬರುತ್ತಿದೆ. ರೈತರನ್ನು ಆರ್ಥಿಕವಾಗಿ ಸಫಲರನ್ನಾಗಿಸಲು ಕೃಷಿ ಮೇಳವನ್ನು ಆಯೋಜಿಸಲಾಗಿದೆ. ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯದ ಮಹತ್ವ ಎಲ್ಲರಿಗೂ ಮುಂದಿನ ದಿನಗಳಲ್ಲಿ ತಿಳಿಯುತ್ತದೆ ಎಂದು ತಿಳಿಸಿದರು.
ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಅಭಿವೃದ್ಧಿ ಪಡಿಸಿದ ಐದು ಕೃಷಿ ತಳಿಗಳನ್ನು ಮತ್ತು 9 ತಾಂತ್ರಿಕತೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆ ಮಾಡಿದರು.

