ಮಂಡ್ಯ: ಉತ್ತರ ಕರ್ನಾಟಕದ ರೈತರ ಹೋರಾಟಕ್ಕೆ ಬೆಂಬಲವಾಗಿ ಮಂಡ್ಯದಲ್ಲಿ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಕಬ್ಬಿನ ದರ ಏರಿಕೆಗಾಗಿ ಆಗ್ರಹಿಸುತ್ತಾ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ರೈತರು, ಸರ್ಕಾರದ ನೀತಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಎದುರು ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ರೈತನ ಕಷ್ಟಕ್ಕೆ ಯಾವುದೇ ಪ್ರತಿಫಲ ಸಿಗುತ್ತಿಲ್ಲ, ಬೆಂಬಲ ಬೆಲೆ ಸಿಗದೇ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಸಾಲ ಮಾಡಿ ಬೆಳೆದ ಕಬ್ಬಿಗೆ ನ್ಯಾಯಯುತ ಬೆಂಬಲ ಬೆಲೆ ನೀಡದ ಸರ್ಕಾರ ಕಾರ್ಖಾನೆ ಮಾಲೀಕರ ಪರ ನಿಂತಿದೆ ಎಂದು ಆರೋಪಿಸಿದ ಅವರು, ಪ್ರತಿ ಟನ್‌ಗೆ ₹3,500 ಬೆಂಬಲ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿದರು. ರೈತರ ಬೇಡಿಕೆಗಳನ್ನು ತಕ್ಷಣ ಈಡೇರಿಸಲು ಸರ್ಕಾರ ವಿಫಲವಾದರೆ ಉಗ್ರ ಹೋರಾಟ ಆರಂಭಿಸುವ ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ಭಾರತೀಯ ಕಿಸಾನ್ ಸಂಘದ ಅಧ್ಯಕ್ಷ ಹಾಡ್ಯ ರಮೇಶ್, ಅಪ್ಪಾಜಿ ಬೂದನೂರು ಸೇರಿದಂತೆ ಹಲವು ರೈತ ನಾಯಕರು ಭಾಗವಹಿಸಿದ್ದರು.
ವರದಿ: ರಂಜಿತ ರೇವಣ್ಣ ನಾಟನಹಳ್ಳಿ

