ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದೆ. ಕೊಡಗು, ಮಂಡ್ಯ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವುದರಿಂದ ಕೆಆರ್‌ಎಸ್ ಜಲಾಶಯವು ಭರ್ತಿಯಾಗುವ ಹಂತಕ್ಕೆ ಹೋಗಿದೆ. ತುಂಬಿ ತುಳುಕುತ್ತಿರುವ ಕೆಆರ್‌ಎಸ್ ಡ್ಯಾಂ ಭರ್ತಿಯಾಗುವುದಕ್ಕೆ ಕೇವಲ 3 ಅಡಿಯಷ್ಟೇ ಬಾಕಿ ಇದೆ.
ಕೆಆರ್ ಎಸ್ ಡ್ಯಾಂ ತುಂಬುತ್ತಿರುವುದರಿಂದ ಯಾವುದೇ ಸಮಯದಲ್ಲಿ ಹೆಚ್ಚಿನ ನೀರು ಬಿಡುಗಡೆಯಾಗುವ ಸಾಧ್ಯತೆಯಿದೆ. ಹೀಗಾಗಿ ನದಿ ಪಾತ್ರದ ಜನರು ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ. ಕೆಆರ್‌ಎಸ್ ಜಲಾಶಯ ಭರ್ತಿಯಾಗುತ್ತಿರುವುದರಿಂದ ಹೊರ ಹರಿವಿನ ಪ್ರಮಾಣವನ್ನು ಯಾವುದೇ ಸಂದರ್ಭದಲ್ಲಾದರೂ ಹೆಚ್ಚಿಸಬಹುದು. ಹೀಗಾಗಿ, ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆಯಿದೆ ಎಂದು ಜನರಿಗೆ ಕಾವೇರಿ ನೀರಾವರಿ ನಿಗಮ ಮುನ್ನೆಚ್ಚರಿಕೆಯನ್ನು ನೀಡಿದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಕೆಆರ್‌ಎಸ್ ಡ್ಯಾಂನ ಒಳ ಹರಿವಿನ ಪ್ರಮಾಣವೂ ಹೆಚ್ಚಾಗಿದೆ. ಅಣೆಕಟ್ಟೆಯಿಂದ ಪ್ರಸ್ತುತ 17 ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಡಲಾಗಿದೆ. ಈ ಪ್ರಮಾಣವು ಯಾವುದೇ ಸಂದರ್ಭದಲ್ಲೂ 30,000 ಕ್ಯೂಸೆಕ್‌ಗೆ ಹೆಚ್ಚಾಗಬಹುದು. ಇದರಿಂದ ಕಾವೇರಿ ನದಿ ಪಾತ್ರದ ತಗ್ಗು ಪ್ರದೇಶಗಳು ಮತ್ತು ನದಿಯ ಎರಡೂ ದಂಡೆಗಳಲ್ಲಿರುವ ಜನರು ಎಚ್ಚರ ವಹಿಸಬೇಕು ಹಾಗೂ ತಮ್ಮ ಆಸ್ತಿಪಾಸ್ತಿ, ಜಾನುವಾರುಗಳ ರಕ್ಷಣೆಗೆ ಕ್ರಮ ವಹಿಸಬೇಕು. ಹೀಗೆಂದು ಕಾವೇರಿ ನೀರಾವರಿ ನಿಗಮದ ಅಧೀಕ್ಷಕ ಎಂಜಿನಿಯರ್ ಕೆ.ರಘುರಾಮ್ ಮುನ್ನೆಚ್ಚರಿಕೆ ನೀಡಿದ್ದಾರೆ. ನೀರು ಹೆಚ್ಚಾಗಿರುವ ಕಾರಣ ಪ್ರವಾಸಿ ತಾಣಗಳಿಗೂ ಪ್ರವಾಸಿಗರನ್ನು ನಿಷೇಧ ಮಾಡಲಾಗಿದೆ.
ಅತಿ ಹಚ್ಚು ಮಳೆಯಾಗುತ್ತಿರುವ ಕಾರಣ ಜಿಲ್ಲಾಧಿಕಾರಿಗಳು, ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಮಿತಿ ಸಭೆ ನಡೆಸಿದ್ದಾರೆ. ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿಯಿಂದ ಆಗಬಹುದಾದ ಹಾನಿ ಹಾಗೂ ಕೈಗೊಳ್ಳಬಹುದಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಿ ಸಲಹೆ, ಸೂಚನೆ ನೀಡಿದ್ದಾರೆ. ಇದಷ್ಟೇ ಅಲ್ಲದೆ ಅಗ್ನಿಶಾಮಕ, ಸೆಸ್ಕ್, ಅರಣ್ಯ, ತಹಸೀಲ್ದಾರ್, ನಗರ ಸ್ಥಳೀಯ ಸಂಸ್ಥೆಗಳು 24*7 ಕಾರ್ಯ ನಿರ್ವಹಿಸುವ ಕಂಟ್ರೋಲ್ ರೂಂ ಸ್ಥಾಪಿಸಬೇಕು. ಸಾರ್ವಜನಿಕರು ಸಂಪರ್ಕಿಸಬೇಕಿರುವ ದೂರವಾಣಿ ಸಂಖ್ಯೆಯ ಮಾಹಿತಿ ನೀಡಬೇಕು. ಅಗ್ನಿಶಾಮಕ ಇಲಾಖೆಯು ಅತಿವೃಷ್ಟಿ ಸಂದರ್ಭದಲ್ಲಿ ಬೇಕಿರುವ ಬೋಟ್, ಲೈಫ್ ಜಾಕೆಟ್ ಸೇರಿದಂತೆ ಇನ್ನಿತರೆ ಪರಿಕರಗಳು ಸುಸ್ಥಿತಿಯಲ್ಲಿರುವ ಬಗ್ಗೆ ಪರಿಶೀಲಿಸಿಕೊಳ್ಳಿ. ಸ್ಥಳೀಯವಾಗಿ ನುರಿತ ಈಜುಗಾರರ ಪಟ್ಟಿಯನ್ನು ಸಿದ್ಧಪಡಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.
ಮಂಡ್ಯ ಜಿಲ್ಲೆಯ 67 ಗ್ರಾಮಗಳನ್ನು ನೆರೆಗೆ ಸಿಲುಕಬಹುದಾದ ಗ್ರಾಮಗಳು ಎಂದು ಈಗಾಗಲೇ ಗುರುತಿಸಲಾಗಿದೆ. ಇವುಗಳಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಬೇಕು. ತಹಶೀಲ್ದಾರ್‌ಗಳು ಗ್ರಾ.ಪಂ. ಮಟ್ಟದಲ್ಲಿ ಸಭೆ ನಡೆಸಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಅವಶ್ಯಕವಾದಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಬೇಕಿದ್ದು, ಮೂಲ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಸಿದ್ಧತೆ ಮಾಡಿಕೊಳ್ಳಿ ಎಂದು ಡಿಸಿ ಸೂಚನೆ ನೀಡಿದ್ದಾರೆ