ರಾಜ್ಯದಲ್ಲಿ ಮಹಾಮಾರಿ ಕೊರೊನಾ ಕೇಸ್ ಹೆಚ್ಚಾಗಿರುವ ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವುದರ ಬಗೆಗಿನ ನಿರ್ಧಾರ ಹಿಂಪಡೆಯಲಿ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿ ಟ್ವೀಟ್ ಮಾಡಿದ್ದಾರೆ.
ಈ ಬಗ್ಗೆ ಸಾಲು ಸಾಲು ಟ್ವೀಟ್ ಮಾಡಿರುವ ಹೆಚ್ಡಿಕೆ, ಗುರುವಾರದಿಂದ ರಾಜ್ಯದಾದ್ಯಂತ SSLC ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರ ಈ ನಿರ್ಧಾರದಿಂದ ತಕ್ಷಣವೇ ಹಿಂದೆ ಸರಿಯಬೇಕು. ಪರೀಕ್ಷೆ ನಡೆಸಲೇಬೇಕು ಎಂದಾದರೆ ಅಕ್ಟೋಬರ್ ತಿಂಗಳವರೆಗೆ ಕಾಯ್ದು ನಡೆಸಲಿ ಎಂದಿದ್ದಾರೆ.
ಅಲ್ಲದೇ, ಕೊರೋನಾ ಸೋಂಕು ಏರುಗತಿಯಲ್ಲಿ ಸಾವಿನ ನಗಾರಿ ಬಾರಿಸುತ್ತಿರುವ ಇಂತಹ ಆತಂಕದ ಸಂದರ್ಭದಲ್ಲಿ ಸುಮಾರು ಎಂಟು ಲಕ್ಷ SSLC ವಿದ್ಯಾರ್ಥಿಗಳು, ಪೋಷಕರು ಹಾಗೂ ಪರೀಕ್ಷಾ ಸಿಬ್ಬಂದಿ ಸೇರಿದಂತೆ 24 ಲಕ್ಷ ಮಂದಿಯ ಜೀವ ಮತ್ತು ಭವಿಷ್ಯದೊಂದಿಗೆ ರಾಜ್ಯ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಹೆಚ್ಡಿಕೆ ಆರೋಪಿಸಿದ್ದಾರೆ.
ಕೊರೋನಾ ಸೋಂಕು ಸಮುದಾಯ ಪ್ರಸರಣ ಭೀತಿಯ ಹಿನ್ನೆಲೆಯಲ್ಲಿ ನೆರೆಯ ತೆಲಂಗಾಣ ರಾಜ್ಯದಲ್ಲಿ SSLC ಪರೀಕ್ಷೆಯನ್ನು ರದ್ದುಪಡಿಸಿ ಉತ್ತೀರ್ಣ ಗೊಳಿಸಲಾಗಿದೆ. ಅದೇ ರೀತಿಯಲ್ಲಿ ರಾಜ್ಯ ಸರ್ಕಾರ ನಿರ್ಧಾರ ತಳೆಯಬಹುದು. ಪರೀಕ್ಷೆಗಳನ್ನು ನಡೆಸಲೇ ಬೇಕೆಂದರೆ ಅಕ್ಟೋಬರ್ ತಿಂಗಳವರೆಗೆ ಕಾಯಲಿ.
ಏನಾದರೂ ಅವಗಡಗಳು ಸಂಭವಿಸಿದರೆ ಶಿಕ್ಷಣ ಸಚಿವರು ಮತ್ತು ರಾಜ್ಯ ಸರ್ಕಾರವೇ ಹೊಣೆ ಎಂದು ಎಚ್ಚರಿಕೆ ನೀಡುತ್ತೇನೆ. ಸರ್ಕಾರ ಈ ಬಗ್ಗೆ ತಕ್ಷಣವೇ ನಿರ್ಧಾರ ಕೈಗೊಳ್ಳಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.