www.karnatakatv.net: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದು, ಇಂದು ಮುಂಬೈನ್ಯಾಯಾಲಯ ನವೆಂಬರ್ 6 ರವರೆಗೆ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ಒಪ್ಪಿಸಿದೆ.
ಹಣ ವರ್ಗಾವಣೆ ಪ್ರಕರಣದಲ್ಲಿ ಸುಮಾರು 12 ಗಂಟೆಗಳ ಕಾಲ ವಿಚಾರಣೆಯ ನಂತರ ಸೋಮವಾರ ತಡರಾತ್ರಿ ದೇಶಮುಖ್ ರನ್ನು ಇಡಿ ಬಂಧಿಸಿದ್ದು, ಇಂದು ವಿಶೇಷ ರಜಾ ನ್ಯಾಯಾಲಯಕ್ಕೆ ಹಾಜರುಪಡಿಸಿತು ಮತ್ತು ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು 14 ದಿನ ತನ್ನ ವಶಕ್ಕೆ ನೀಡುವಂತೆ ಮನವಿ ಮಾಡಿತು. ಆರೋಪಿಯ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪಿಬಿ ಜಾಧವ್ ಅವರು ಮಹಾರಾಷ್ಟ್ರ ಮಾಜಿ ಗೃಹ ಸಚಿವರನ್ನು ಹೆಚ್ಚಿನ ವಿಚಾರಣೆಗಾಗಿ ನವೆಂಬರ್ 6 ರವರೆಗೆ ಇಡಿ ವಶಕ್ಕೆ ನೀಡಿ ಆದೇಶಿಸಿದ್ದಾರೆ. ದೇಶಮುಖ್ ಅವರು ರಾಜ್ಯದ ಗೃಹ ಸಚಿವರಾಗಿದ್ದಾಗ ತಮ್ಮ ಅಧಿಕೃತ ಸ್ಥಾನವನ್ನು ದುರುಪಯೋಗಪಡಿಸಿಕೊಂಡು, ವಜಾಗೊಂಡ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಮೂಲಕ ಮುಂಬೈನ ವಿವಿಧ ಬಾರ್ ಮತ್ತು ರೆಸ್ಟೋರೆಂಟ್‌ಗಳಿoದ 4.70 ಕೋಟಿ ರೂಪಾಯಿ ಸಂಗ್ರಹಿಸಿದ್ದಾರೆ ಎಂದು ಇಡಿ ಆರೋಪಿಸಿದೆ.