ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಮೊರಟಗಿ ಗ್ರಾಮದಲ್ಲಿ ಮೇ 14ರ ಗುರುವಾರ ತಡರಾತ್ರಿ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಸುರಿದ ಭಾರೀ ಮಳೆಯ ನಡುವೆ ಭೀಕರ ದುರಂತ ಸಂಭವಿಸಿದೆ. ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರನ್ನು ಗುರುನಾಥ ಬಡಿಗೇರ (35), ಜ್ಯೋತಿ ಬಡಿಗೇರ (28), ಕಾಳಮ್ಮ ಬಡಿಗೇರ (13) ಹಾಗೂ ಕೀರ್ತಿ ಬಡಿಗೇರ (9) ಎಂದು ಗುರುತಿಸಲಾಗಿದೆ. ಮನೆಯ ದುರಸ್ತಿ ಕೆಲಸ ನಡೆಯುತ್ತಿದ್ದ ಕಾರಣ ಕುಟುಂಬ ತಾತ್ಕಾಲಿಕವಾಗಿ ಬಾಡಿಗೆ ಮನೆಯಲ್ಲಿ ವಾಸವಾಗಿತ್ತು. ರಾತ್ರಿ ಎಲ್ಲರೂ ಮನೆಯಲ್ಲಿ ನಿದ್ರಿಸುತ್ತಿದ್ದ ವೇಳೆ ಈ ಅವಘಡ ನಡೆದಿದೆ.
ಧಾರಾಕಾರ ಮಳೆಯಿಂದಾಗಿ ಹಳೆಯ ಮನೆಯ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಕುಟುಂಬದ ನಾಲ್ವರು ಹೊರಬರಲು ಸಾಧ್ಯವಾಗದೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅದೃಷ್ಟವಶಾತ್ ಮನೆಯ ಹೊರಭಾಗದಲ್ಲಿ ಮಲಗಿದ್ದ ಗುರುನಾಥ ಅವರ ತಾಯಿ ಮತ್ತು ಪುತ್ರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆ ಬಳಿಕ ಸ್ಥಳಕ್ಕೆ ಸಿಂದಗಿ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಮೃತರ ಕುಟುಂಬದ ಆಕ್ರಂದನ ಸ್ಥಳದಲ್ಲಿ ಮನಕಲಕುವಂತಿತ್ತು. ನಂತರ ಸ್ಥಳಕ್ಕೆ ಸಚಿವ ಎಂ. ಬಿ. ಪಾಟೀಲ್ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದು, ಸರ್ಕಾರದಿಂದ ತಲಾ ₹5 ಲಕ್ಷ ಪರಿಹಾರ ಹಾಗೂ ವೈಯಕ್ತಿಕ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.




