ಪ್ರತಿ ಆಷಾಡ ಶುಕ್ರವಾರ ಚಾಮುಂಡಿ ಬೆಟ್ಟಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಪ್ರತಿ ಶುಕ್ರವಾರವೂ ತಾಯಿ ಚಾಮುಂಡೇಶ್ವರಿ ವಿವಿಧ ಅಲಂಕಾರದಲ್ಲಿ ಕಂಗೂಳಿಸುತ್ತಾಳೆ. ಆಷಾಡದ ವಿಶೇಷವಾಗಿ ಶಕ್ತಿದೇವತೆ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವವು ಚಾಮುಂಡಿ ಬೆಟ್ಟದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ನೆರವೇರಿತು.
ಚಿನ್ನದ ಪಲ್ಲಕ್ಕಿಯಲ್ಲಿ ದೇವಿಯ ಮೂರ್ತಿಯನ್ನು ಇರಿಸಿ ದೇಗುಲದ ಸುತ್ತ ಮೆರವಣಿಗೆ ಮಾಡಲಾಯಿತು. ಅಪಾರ ಸಂಖ್ಯೆಯ ಭಕ್ತರು ಜೈ ದುರ್ಗೆ, ಜೈ ಚಾಮುಂಡೇಶ್ವರಿ ಎಂಬ ಘೋಷಣೆ ಕೂಗುತ್ತ ಸಂಭ್ರಮಿಸಿದರು. ಅರಮನೆ ಪೊಲೀಸ್ ಬ್ಯಾಂಡ್ ಜೊತೆಗೆ ಮಂಗಳವಾದ್ಯ, ಛತ್ರಿ, ಚಾಮರಗಳೊಂದಿಗೆ ಮೆರವಣಿಗೆ ಮುಂದುವರಿಯಿತು. ಆಷಾಢ ಮಾಸದ ಕೊನೆಯ ವಾರದಲ್ಲಿ ಪ್ರತಿ ವರ್ಷ ನಡೆಯುವ ಈ ಉತ್ಸವಕ್ಕೆ ಭಕ್ತರ ದಂಡು ಹರಿದು ಬಂದಿತ್ತು.
ಬೆಳಿಗ್ಗೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ತ್ರಿಷಿಕಾ ಕುಮಾರಿ ಒಡೆಯರ್ ಚಾಮುಂಡಿ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ನಂತರದಲ್ಲಿ ಮಹಾಮಂಗಳಾರತಿ ನೆರವೇರಿಸಲಾಯಿತು. ಬಳಿಕ ಉತ್ಸವ ಮೂರ್ತಿಯನ್ನು ಬೆಳ್ಳಿ ಪಲ್ಲಕ್ಕಿಯಲ್ಲಿ ಇರಿಸಿ, ದೇವಸ್ಥಾನದ ಆವರಣದಲ್ಲಿ ಪ್ರದಕ್ಷಿಣೆ ಹಾಕಲಾಯಿತು. ನಂತರ ದೇವಸ್ಥಾನದ ಮುಂಭಾಗದಲ್ಲಿ ಚಿನ್ನದ ಪಲ್ಲಕ್ಕಿಯಲ್ಲಿ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ಮೆರವಣಿಗೆ ಮಾಡಲಾಯಿತು.
ತಾಯಿಯ ವರ್ಧಂತಿ ಹಿನ್ನಲೆ ಬೆಳಿಗ್ಗೆ 8ರಿಂದ ಭಕ್ತರಿಗೆ ದರ್ಶನವಕಾಶ ನೀಡಲಾಗಿತ್ತು ಮತ್ತು ಮೈಸೂರಿನ ವಿವಿಧೆಡೆ ವರ್ಧಂತಿ ಪ್ರಯುಕ್ತ ಪೂಜೆ, ಪ್ರಸಾದ ವಿನಿಯೋಗ ನಡೆಯಿತು.
ವರದಿ:ರಂಜಿತ ರೇವಣ್ಣ ನಾಟನಹಳ್ಳಿ