ಹಾವೇರಿ: ಬೆಂಬಲ ಬೆಲೆಯಡಿ ಜಿಲ್ಲೆಯ ಹಾನಗಲ್, ಶಿಗ್ಗಾಂವ, ಹಿರೇಕೆರೂರು ಹಾಗೂ ರಾಣೇಬೆನ್ನೂರ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಭತ್ತ ಖರೀದಿ ಕೇಂದ್ರ ಆರಂಭಿಸಲಿದ್ದು, ಡಿಸೆಂಬರ 1 ರಿಂದ ನೋಂದಣಿ ಆರಂಭವಾಗಲಿದ್ದು, ರೈತರು ಇದರ ಸದುಪಯೋಗ ಪಡಿಸಿಕೊಳ್ಳಲು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ತಿಳಿಸಿದ್ದಾರೆ.
ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕನಿಷ್ಟ ಬೆಂಬಲ ಬೆಲೆಯಡಿ ಭತ್ತ ಖರೀದಿ ಕೇಂದ್ರ ಆರಂಭಿಸುವ ಕುರಿತಂತೆ ಜಿಲ್ಲಾ ಟಾಸ್ಕ್‍ಫೋರ್ಸ್ ಸಮಿತಿ ಸಭೆ ನಡೆಸಿದ ಅವರು, ಸರ್ಕಾರದ ಮಾರ್ಗಸೂಚಿಯಂತೆ ಪ್ರತಿ ಕ್ವಿಂಟಾಲ್ ಸಾಮಾನ್ಯ ಭತ್ತಕ್ಕೆ 1940 ರೂ. ಹಾಗೂ ‘ಎ’ ಗ್ರೇಡ್ ಭತ್ತಕ್ಕೆ ಪ್ರತಿ ಕ್ವಿಂಟಲ್‍ಗೆ 1960 ರೂ.ನಂತೆ ಖರೀದಿಸಲಾಗುವುದು ಎಂದು ತಿಳಿಸಿದರು.
2021-22ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ ಬೆಲೆಯೋಜನೆಯಡಿ ರಾಜ್ಯದ ರೈತರಿಂದ 3.35 ಲಕ್ಷ ಮೆಟ್ರಿಕ್ ಟನ್ ಭತ್ತವನ್ನು ಖರೀದಿಸಲು ಅನುಮತಿ ನೀಡಲಾಗಿದೆ. ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತವನ್ನು ಮಾರಾಟ ಮಾಡಲು ಇಚ್ಛಿಸುವ ರೈತರು ಭತ್ತ ಖರೀದಿ ಏಜೆನ್ಸಿಯಾದ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದಿಂದ ಖರೀದಿಸಲಾಗುವುದು. ಜಿಲ್ಲೆಯಲ್ಲಿ 18,250 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯಲಾಗಿದೆ ಎಂದು ಮಾಹಿತಿ ನೀಡಿದರು.
ಹಾನಗಲ್, ಶಿಗ್ಗಾಂವ, ಹಿರೇಕೆರೂರು ಹಾಗೂ ರಾಣೇಬೆನ್ನೂರ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಕೇಂದ್ರ ಆರಂಭಿಸುವ ಕುರಿತಂತೆ ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಬೇಕು. ರೈತರಿಗೆ ಯಾವುದೇ ತೊಂದರೆಯಾಗದಂತೆ ಕ್ರಮವಹಿಸಬೇಕು. ಬೆಂಬಲ ಬೆಲೆಯಡಿ ಭತ್ತ ಮಾರಾಟ ಮಾಡಲು ಇಚ್ಛಿಸುವ ರೈತರು ತಮ್ಮ ಫ್ರೂಟ್ ಐಡಿ ನಂಬರ್ ನೀಡಿ ನೋಂದಾಯಿಸಬೇಕು. ಸರ್ಕಾರದ ಮಾರ್ಗಸೂಚಿಯಂತೆ ಭತ್ತದ ಗುಣಮಟ್ಟ ಪರೀಕ್ಷೆಗಾಗಿ ಕೃಷಿ ಇಲಾಖೆಯಿಂದ ಗ್ರೇಡರ್‍ಗಳನ್ನು ನೇಮಕಮಾಡಿ ಎಲ್ಲ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ಇದೇ ಸಂದರ್ಭದಲ್ಲಿ ವಿವಿಧ ರೈಸ್ ಮಿಲ್ ಮಾಲೀಕರೊಂದಿಗೆ ಕನಿಷ್ಟ ಬೆಂಬಲ ಬೆಲೆಯಡಿ ಖರೀದಿಸಿದ ಭತ್ತದ ಹಲ್ಲಿಂಗ್ ಮಾಡುವ ಕುರಿತಂತೆ ಚರ್ಚಿಸಲಾಯಿತು.
ಸಭೆಯಲ್ಲಿ ಆಹಾರ ಮತ್ತು ನಾಗರಿಕ ಇಲಾಖೆ ಉಪನಿರ್ದೇಶಕರಾದ ವಿನೋದಕುಮಾರ ಹೆಗ್ಗಳಗಿ, ಕೃಷಿ ಉತ್ಪನ್ನ ಮಾರುಕಟ್ಟೆ ಕಾರ್ಯದರ್ಶಿ ಕಬ್ಬೇರಹಳ್ಳಿ ಹಾಗೂ ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.