ಗೃಹಲಕ್ಷ್ಮಿ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್. ಬಾಕಿ ಉಳಿದಿರುವ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕೂಡಲೇ ಬಿಡುಗಡೆ ಮಾಡಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ. ಶುಕ್ರವಾರ ವಿಧಾನಸಭೆಯಲ್ಲಿ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಈ ವಿಷಯ ಪ್ರಸ್ತಾಪಿಸಿದಾಗ ಸಿಎಂ ಸಿದ್ದರಾಮಯ್ಯ ಉತ್ತರಿಸಿದ್ದಾರೆ.
ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಗೃಹ ಲಕ್ಷ್ಮೀ ಯೋಜನೆ ಸಂಬಂಧ ಕಾವೇರಿದ ಚರ್ಚೆ ನಡೆಯಿತು. ಗೃಹ ಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ನೀಡುವ ಹಣ ಬಿಡುಗಡೆಯಲ್ಲಿನ ವಿಳಂಬದ ಕುರಿತು ತೀವ್ರ ಗದ್ದಲ, ಮಾತಿನ ಚಕಮಕಿ ನಡೆಯಿತು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಪ್ರತಿಪಕ್ಷದ ಶಾಸಕರು ತೀವ್ರ ವಾಗ್ದಾಳಿ ನಡೆಸಿದರು. ಮುಖ್ಯಮಂತ್ರಿ ಅವರ ಮಧ್ಯಪ್ರವೇಶದಿಂದ ಫಲಾನುಭವಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.
ಫೆಬ್ರವರಿ ಮತ್ತು ಮಾರ್ಚ್ ತಿಂಗಳಲ್ಲಿ ಗೃಹಲಕ್ಷ್ಮಿ ಹಣ ಸಂದಾಯವಾಗಿಲ್ಲ ಎಂಬ ಆರೋಪ ಬಂದಿದೆ. ಈ ಕುರಿತು ಪರಿಶೀಲನೆ ನಡೆಸಿ, ಬಾಕಿ ಇರುವ ಹಣವನ್ನು ಕೂಡಲೇ ಮಹಿಳೆಯರ ಖಾತೆಗೆ ಜಮೆ ಮಾಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ತಿಳಿಸಿದರು.
ಆಗಸ್ಟ್ ತಿಂಗಳವರೆಗೆ ಹಣ ಪಾವತಿ ನಡೆದಿದೆ ಎಂದು ಸ್ಪಷ್ಟಪಡಿಸಿದ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸದನಕ್ಕೆ ನೀಡಿದ ಉತ್ತರ ಸಂಪೂರ್ಣ ನಿಖರವಾಗಿರಲಿಲ್ಲ ಅನ್ನೋದು ಹಕ್ಕುಚ್ಯುತಿ ಆಗುವುದಿಲ್ಲ. ಯಾವುದೇ ಲೋಪ ಕಂಡುಬಂದರೆ ಅದನ್ನು ತಿದ್ದಿ ಹಣ ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದರು.
ವರದಿ : ಲಾವಣ್ಯ ಅನಿಗೋಳ



