ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಸಭೆ, ಸಮಾರಂಭಗಳಿಗೆ ಅನುಮತಿ ಕಡ್ಡಾಯಗೊಳಿಸುವ ಸರ್ಕಾರದ ಆದೇಶಕ್ಕೆ ದೊಡ್ಡ ಹಿನ್ನಡೆ ಉಂಟಾಗಿದೆ. ಆರ್‌ಎಸ್‌ಎಸ್ ಪಥಸಂಚಲನಕ್ಕೆ ಅನುಮತಿ ನಿರಾಕರಿಸಿದ್ದ ಸರ್ಕಾರದ ಕ್ರಮದ ವಿರುದ್ಧ ಸಂಸ್ಥೆ ಸಲ್ಲಿಸಿದ್ದ ಮನವಿಯ ವಿಚಾರಣೆ ವೇಳೆ, ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಸರ್ಕಾರ 10 ಜನಕ್ಕಿಂತ ಹೆಚ್ಚು ಮಂದಿ ಸೇರುವುದನ್ನು ಅಕ್ರಮ ಕೂಟವೆಂದು ಪರಿಗಣಿಸಿ ಪಥಸಂಚಲನಕ್ಕೆ ಅನುಮತಿ ನಿರಾಕರಿಸಿತ್ತು. ಆದರೆ ಹೈಕೋರ್ಟ್ ಅಭಿಪ್ರಾಯಪಟ್ಟಂತೆ, ಸಂವಿಧಾನದ ಆರ್ಟಿಕಲ್ 19(1)(A) ಮತ್ತು (B) ಪ್ರಕಾರ ನಾಗರಿಕರಿಗೆ ಮಾತಿನ ಸ್ವಾತಂತ್ರ್ಯ ಮತ್ತು ಸಭೆ ಆಯೋಜನೆ ಹಕ್ಕು ಇದೆ. ಸರ್ಕಾರದ ಆದೇಶದ ಮೂಲಕ ಈ ಹಕ್ಕುಗಳನ್ನು ನಿರ್ಬಂಧಿಸಲು ಸಾಧ್ಯವಿಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ. ಈಗ ಮುಂದಿನ ವಿಚಾರಣೆ ನವೆಂಬರ್ ಎರಡನೇ ವಾರಕ್ಕೆ ಮುಂದೂಡಲಾಗಿದೆ.
ಇದೀಗ ಸರ್ಕಾರ ಹೈಕೋರ್ಟ್ ತೀರ್ಪನ್ನು ಸುಮ್ಮನೆ ಒಪ್ಪಿಕೊಂಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ವಿಭಾಗೀಯ ಪೀಠದ ಮುಂದೆ ಮೇಲ್ಮನವಿ ಸಲ್ಲಿಸುವಂತೆ ನಾನು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಧಾರವಾಡ ಹೈಕೋರ್ಟ್ ಏಕ ಸದಸ್ಯ ಪೀಠ ತಡೆಯಾಜ್ಞೆ ನೀಡಿದೆ. ಈ ಆದೇಶದ ವಿರುದ್ಧ ನಾವು ಮೇಲ್ಮನವಿ ಸಲ್ಲಿಸುತ್ತೇವೆ ಎಂದು ತಿಳಿಸಿದರು. ಹೀಗಾಗಿ ಪಥಸಂಚಲನ ಪ್ರಕರಣ ಈಗ ಮತ್ತೊಮ್ಮೆ ಕಾನೂನು ಹಾದಿಯತ್ತ ಸಾಗುತ್ತಿದೆ.
ವರದಿ: ರಂಜಿತ ರೇವಣ್ಣ ನಾಟನಹಳ್ಳಿ

