ಗ್ರೇಟರ್ ಬೆಂಗಳೂರು ಚುನಾವಣೆ ಮತ್ತೆ ಫೋಸ್ಟ್‌ಪೋನ್?

ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ಮಹಾನಗರ ಪಾಲಿಕೆಗಳ ಚುನಾವಣೆ ಮತ್ತೆ ವಿಳಂಬವಾಗುವ ಸಾಧ್ಯತೆ ಎದುರಾಗಿದೆ. ಚುನಾವಣೆಯನ್ನು ಮುಂದೂಡಲು ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗ ಸುಪ್ರೀಂ ಕೋರ್ಟ್ ಮೊರೆ ಹೋಗಲು ಸಿದ್ಧತೆ ನಡೆಸಿರುವ ಮಾಹಿತಿ ಲಭ್ಯವಾಗಿದೆ. ಜೂನ್ 14ರಿಂದ 24ರೊಳಗೆ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ಸಿದ್ಧತೆ ನಡೆಸಿದ್ದರೂ, ಜನಗಣತಿ ಮತ್ತು ಮತದಾರರ ಪಟ್ಟಿಯ ವಿಶೇಷ ತುರ್ತು ಪರಿಷ್ಕರಣೆ (SIR) ಪ್ರಕ್ರಿಯೆ ನಡೆಯುತ್ತಿರುವ ಹಿನ್ನೆಲೆ ಅಗತ್ಯ ಸಿಬ್ಬಂದಿ ಕೊರತೆ ಎದುರಾಗಿದೆ. ಎಂದು ಸರ್ಕಾರ ಕಾರಣ ನೀಡಿದೆ. ಇದೇ ಕಾರಣವನ್ನು ಉಲ್ಲೇಖಿಸಿ ಗಡುವು ವಿಸ್ತರಣೆ ಕೇಳಲು ತೀರ್ಮಾನಿಸಲಾಗಿದೆ ಎನ್ನಲಾಗಿದೆ.

ಮಳೆಗಾಲ ಮುಗಿಯುವವರೆಗೆ ಚುನಾವಣೆ ಮುಂದೂಡಲು ಸರ್ಕಾರ ಚಿಂತನೆ ನಡೆಸಿದ್ದು, ಸೆಪ್ಟೆಂಬರ್ ಅಂತ್ಯದವರೆಗೆ ಅವಧಿ ವಿಸ್ತರಣೆ ಕೋರಿ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸುವ ಸಾಧ್ಯತೆ ಇದೆ. ಈ ಸಂಬಂಧ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಜೊತೆ ಸರ್ಕಾರ ಮಟ್ಟದಲ್ಲಿ ಚರ್ಚೆಗಳು ನಡೆದಿವೆ ಎಂದು ಮೂಲಗಳು ತಿಳಿಸಿವೆ. ರಾಜಧಾನಿ ಬೆಂಗಳೂರಿನಲ್ಲಿ ಜನರ ಅಸಮಾಧಾನ ಹಾಗೂ ಸ್ಥಳೀಯ ಸಮಸ್ಯೆಗಳ ಹಿನ್ನೆಲೆ ಚುನಾವಣೆಗೆ ಇದು ಸೂಕ್ತ ಸಮಯವಲ್ಲ ಎಂಬ ರಾಜಕೀಯ ಲೆಕ್ಕಾಚಾರವೂ ಆಡಳಿತಾರೂಢ ಕಾಂಗ್ರೆಸ್ ಪಕ್ಷದೊಳಗೆ ಚರ್ಚೆಗೆ ಕಾರಣವಾಗಿದೆ ಎನ್ನಲಾಗಿದೆ. ಪಕ್ಷದ ರಾಜ್ಯ ಉಸ್ತುವಾರಿ ರಂಡೀಪ್ ಸಿಂಗ್ ಸುರ್ಜೇವಾಲಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಅವರೊಂದಿಗೆ ಈ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಇದೀಗ ಸುಪ್ರೀಂ ಕೋರ್ಟ್ ಈಗಾಗಲೇ ಜೂನ್ 30ರೊಳಗೆ ಚುನಾವಣೆ ಪೂರ್ಣಗೊಳಿಸಲು ಗಡುವು ನೀಡಿದೆ. ಆದರೆ ಸಿಬ್ಬಂದಿ ಹಾಗೂ ಲಾಜಿಸ್ಟಿಕ್ ಸಮಸ್ಯೆಗಳ ಕಾರಣ ಗಡುವು ಪಾಲಿಸಲು ಸಾಧ್ಯವಾಗುತ್ತಿಲ್ಲ ಎಂದು ರಾಜ್ಯ ಚುನಾವಣಾ ಆಯೋಗ ಕೋರ್ಟ್‌ಗೆ ತಿಳಿಸಿದೆ. ಈ ನಡುವೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ನಿರಂತರವಾಗಿ ಮುಂದೂಡುತ್ತಿರುವುದಕ್ಕೆ ವಿರೋಧ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ. ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ, ʼಬೆಂಗಳೂರು ಜನರ ಅಸಮಾಧಾನದಿಂದ ಸರ್ಕಾರ ಚುನಾವಣೆಗೆ ಹೆದರುತ್ತಿದೆʼ ಎಂದು ಆರೋಪಿಸಿದ್ದಾರೆ. BBMP ಅವಧಿ 2020ರಲ್ಲೇ ಮುಕ್ತಾಯಗೊಂಡಿದ್ದರೂ ಇನ್ನೂ ಚುನಾವಣೆ ನಡೆಯದಿರುವುದರಿಂದ ನಾಗರಿಕ ಪ್ರತಿನಿಧಿತ್ವ ಇಲ್ಲದ ಪರಿಸ್ಥಿತಿ ಮುಂದುವರಿದಿದೆ. ಈ ವಿಚಾರ ಸಾಮಾಜಿಕ ಜಾಲತಾಣಗಳಲ್ಲೂ ಚರ್ಚೆಗೆ ಗ್ರಾಸವಾಗಿದ್ದು, ಚುನಾವಣೆ ವಿಳಂಬಕ್ಕೆ ರಾಜಕೀಯ ಕಾರಣಗಳೇ ಪ್ರಮುಖವೆಂದು ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

About The Author