Haveri: ಹುಲಗೂರಿನಲ್ಲಿ ಸ್ವಚ್ಛತೆ ಮರೀಚಿಕೆ: ರಸ್ತೆ ಮೇಲೆ ಹರಿಯುತ್ತಿರುವ ಕೊಳಚೆ ನೀರು, ಕುಡಿಯುವ ನೀರಿಗೂ ಪರದಾಟ!

Haveri: ಶಿಗ್ಗಾವಿ: ಕ್ಷೇತ್ರದ ಶಾಸಕರು ಆರೋಗ್ಯ ಮತ್ತು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವುದಾಗಿ ಹೇಳುತ್ತಾರೆ. ಆದರೆ, ಹುಲಗೂರ ಗ್ರಾಮದ ಪರಿಸ್ಥಿತಿ ಮಾತ್ರ ಇದಕ್ಕೆ ತದ್ವಿರುದ್ಧವಾಗಿದೆ ಎಂಬ ಆರೋಪ ಸಾರ್ವಜನಿಕರಿಂದ ಕೇಳಿಬರುತ್ತಿದೆ.

ಹುಲಗೂರ ಗ್ರಾಮದ ಹಲವು ಕಡೆಗಳಲ್ಲಿ ಸ್ವಚ್ಛತೆ ಕಾಣದೆ, ಎಲ್ಲೆಂದರಲ್ಲಿ ಕಸದ ರಾಶಿ ಬಿದ್ದಿದ್ದು, ಗಟಾರುಗಳು ಕೊಳಚೆಯಿಂದ ತುಂಬಿ ಗಬ್ಬು ನಾರುತ್ತಿರುವ ಸ್ಥಿತಿ ನಿರ್ಮಾಣವಾಗಿದೆ. ಇನ್ನು ಗ್ರಾಮದ ಒಂದನೇ ವಾರ್ಡ್‌ನಲ್ಲಿ ಗಟಾರು ವ್ಯವಸ್ಥೆಯೇ ಇಲ್ಲದ ಕಾರಣ ಕೊಳಚೆ ನೀರು ರಸ್ತೆಯ ಮೇಲೆಯೇ ಹರಿಯುತ್ತಿದೆ. ಇದರಿಂದ ಸಾರ್ವಜನಿಕರು, ವಾಹನ ಸವಾರರು ಹಾಗೂ ಸ್ಥಳೀಯ ನಿವಾಸಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

ಇದರ ಜೊತೆಗೆ ವಾರ್ಡ್‌ನ ನಿವಾಸಿಗಳು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಹಲವು ವರ್ಷಗಳಿಂದ ಸಮಸ್ಯೆ ಮುಂದುವರಿದಿದ್ದರೂ, ಗ್ರಾಮ ಪಂಚಾಯತಿ ಅಧಿಕಾರಿಗಳು ಹಾಗೂ ವಾರ್ಡ್ ಸದಸ್ಯರಿಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸಮಸ್ಯೆ ತಿಳಿಸಿದರೂ ಕ್ಯಾರೇ ಎನ್ನುತ್ತಿಲ್ಲ. ನಮ್ಮ ಸಮಸ್ಯೆಗಳನ್ನು ಕೇಳುವವರು ಯಾರು?” ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.

ಗ್ರಾಮ ಪಂಚಾಯತಿ ಅಧಿಕಾರಿಗಳು ಹಾಗೂ ವಾರ್ಡ್ ಸದಸ್ಯರು ಕಣ್ಣಿದ್ದೂ ಕಣ್ಣುಮುಚ್ಚಿ ಕುಳಿತಿದ್ದಾರೆ ಎಂಬ ಆರೋಪವೂ ಕೇಳಿಬಂದಿದ್ದು, ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆಗಳನ್ನು ಪರಿಶೀಲಿಸಿ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಆರೋಗ್ಯ ಮತ್ತು ಸ್ವಚ್ಛತೆಗೆ ಆದ್ಯತೆ ನೀಡುವ ಶಾಸಕರು ಇತ್ತ ಕಡೆಗೂ ಗಮನಹರಿಸಿ, ಹುಲಗೂರಿನ ಮೂಲಭೂತ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕು ಎಂಬುದು ಸ್ಥಳೀಯರ ಒತ್ತಾಯವಾಗಿದೆ.

About The Author