Haveri News: ಹಾನಗಲ್: ಹವಾಮಾನ ಆಧಾರಿತ ಬೆಳೆವಿಮೆ, ಬರಗಾಲ ಘೋಷಣೆ,ಸಾಲಮನ್ನಾ ಹಾಗೂ ಹೆಸ್ಕಾಂ ಸಮಸ್ಯೆಗಳು, ನೀರಾವರಿ ಯೋಜನೆಗಳು ಸೇರಿದಂತೆ ವಿವಿಧ ರೈತಪರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜುಲೈ 21ರಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಹಾವೇರಿಯಲ್ಲಿ ನಡೆಯುವ ರೈತ ಸಂಘದಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಅಧ್ಯಕ್ಷ ಮರೀಗೌಡ ಪಾಟೀಲ್ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆವರು, ಬೆಳೆವಿಮೆ ನೋಂದಣಿ ಪ್ರಕ್ರಿಯೆಯನ್ನು ಸರಳಗೊಳಿಸಬೇಕು, ಬಿಡದಿ ಭೂಸ್ವಾಧೀನದ ಹೆಸರಿನಲ್ಲಿ ರೈತರ ಮೇಲೆ ಒತ್ತಡ ಹೇರಿ ಭೂಮಿ ಸ್ವಾಧೀನಪಡಿಸಿಕೊಳ್ಳುವ ಕ್ರಮವನ್ನು ಕೈಬಿಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು. ಜನಪ್ರತಿನಿಧಿಗಳು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಹಾವೇರಿ ಜಿಲ್ಲೆ ಹಾಗೂ ತಾಲೂಕನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ಒತ್ತಾಯಿಸಿದರು.
ರೈತರ ಸಮಸ್ಯೆಗಳಿಗೆ ಸರ್ಕಾರ ಶೀಘ್ರ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಸಂಘಟಕರು ಎಚ್ಚರಿಕೆ ನೀಡಿದರು. ಜುಲೈ 21ರಂದು ಹಾವೇರಿ ನಗರದ ಮೈಲಾರ ಮಹಾದೇವ ವೃತ್ತದಲ್ಲಿ ನಡೆಯಲಿರುವ ಈ ಬೃಹತ್ ಪ್ರತಿಭಟನೆಯಲ್ಲಿ ರೈತರು, ವಿವಿಧ ರೈತ ಸಂಘಟನೆಗಳ ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕರೆ ನೀಡಿದರು.




