ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರಿತು ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರೇ ಇಲ್ಲದಿದ್ದರೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಯಾವತ್ತೋ ಮುಗಿದುಹೋಗುತ್ತಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತಾವೇ ರಾಜಕೀಯವಾಗಿ ದೊಡ್ಡ ಹೋರಾಟ ಮಾಡಿದ್ದಾಗಿ ಸ್ಮರಿಸಿದ ಕುಮಾರಸ್ವಾಮಿ, ಇಂದು ಅದೇ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಲು ಕಾಂಗ್ರೆಸ್ ಪಕ್ಷದ ಒಳಗಡೆಯೇ ಏನೆಲ್ಲಾ ಷಡ್ಯಂತ್ರಗಳು ನಡೆಯುತ್ತಿವೆ ಎಂಬುದು ಎಲ್ಲರಿಗೂ ಗೊತ್ತಿದೆ. ಇಷ್ಟೆಲ್ಲಾ ನಡೆಯುತ್ತಿದ್ದರೂ ಸಿದ್ದರಾಮಯ್ಯ ಅವರು ಏಕೆ ಮೌನವಾಗಿದ್ದಾರೆ ಎಂಬುದೇ ನನಗೆ ಆಶ್ಚರ್ಯ ತಂದಿದೆ ಎಂದು ಅಚ್ಚರಿ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ವಿರೋಧಿಗಳಿಗೆ ಎಚ್ಚರಿಕೆ ನೀಡಿರುವ ಅವರು, ಯಾವಾಗಲೂ ನೀವೇ ಅಧಿಕಾರದಲ್ಲಿ ಇರುತ್ತೀರಾ? ಇನ್ನೊಂದು ವರ್ಷ ಕಳೆಯಲಿ, ಆಗ ಏನಾಗುತ್ತೆ ಎಂದು ನೋಡೋಣ ಎಂದಿದ್ದಾರೆ. ಹಿಂದೆ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ತಮ್ಮ ಮೇಲೆ ಗಂಭೀರ ಆರೋಪ ಮಾಡಿದಾಗ ತಾವು ಏಕಾಂಗಿಯಾಗಿದ್ದರೂ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿರಲಿಲ್ಲ. ಆದರೆ ಈಗ ನಮ್ಮ ಕುಟುಂಬವನ್ನೇ ರಾಜಕೀಯವಾಗಿ ಮುಗಿಸಲು ಹೊರಟಿದ್ದೀರಾ ಎಂದು ಕಿಡಿಕಾರಿದ್ದಾರೆ.
ಶೀಘ್ರದಲ್ಲೇ ಹಾಸನಾಂಬೆ ದೇವಾಲಯದ ಬಾಗಿಲು ತೆರೆಯಲಿದ್ದು, ಅಮ್ಮನವರ ಸನ್ನಿಧಿಯಲ್ಲೇ ಕುಳಿತು ಎಲ್ಲವನ್ನೂ ಸವಿಸ್ತಾರವಾಗಿ ಮಾತನಾಡುತ್ತೇನೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ. ಅಷ್ಟೇ ಅಲ್ಲದೆ, 2028ಕ್ಕೆ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಬರುವುದು ಶತಃಸಿದ್ಧ. ಆ ಸಂದರ್ಭದಲ್ಲಿ ನನ್ನ ಇನ್ನೊಂದು ಮುಖವನ್ನು ತೋರಿಸುತ್ತೇನೆ ಎಂದು ರಾಜಕೀಯ ವಿರೋಧಿಗಳಿಗೆ ಬಹಿರಂಗ ಸವಾಲು ಹಾಕಿದ್ದಾರೆ.




