ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಅನಾರೋಗ್ಯಕ್ಕೀಡಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಳಿ ಜ್ವರ ಮತ್ತು ಯೂರಿನ್ ಇನ್ಫೆಕ್ಷನ್‌ನಿಂದ ಬಳಲುತ್ತಿದ್ದ ಅವರನ್ನು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿದ್ದು, ಈಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಅಕ್ಟೋಬರ್ 8ರ ರಾತ್ರಿ ದೇವೇಗೌಡರನ್ನು ತೀವ್ರ ನಿಗಾ ಘಟಕದಿಂದ ವಾರ್ಡ್‌ಗೆ ಸ್ಥಳಾಂತರಿಸಿ ಮುಂದಿನ ಚಿಕಿತ್ಸೆ ನೀಡಲಾಗುತ್ತಿದೆ.
ತಂದೆಯ ಆರೋಗ್ಯ ವಿಚಾರಿಸಲು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ದೆಹಲಿಯಿಂದ ತುರ್ತಾಗಿ ಬೆಂಗಳೂರಿಗೆ ಆಗಮಿಸಿ, ಸಹೋದರ ರೇವಣ್ಣ ಅವರೊಂದಿಗೆ ಆಸ್ಪತ್ರೆಗೆ ತೆರಳಿ ದೇವೇಗೌಡರನ್ನು ಭೇಟಿ ಮಾಡಿದರು. ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ವೈದ್ಯರ ಚಿಕಿತ್ಸೆ ಫಲಕಾರಿಯಾಗಿದ್ದು, ಸಮಸ್ಯೆ ಬಹುತೇಕ ನಿವಾರಣೆಯಾಗಿದೆ. ಆತಂಕ ಪಡುವ ಅಗತ್ಯವಿಲ್ಲ. ಮೂರ್ನಾಲ್ಕು ದಿನಗಳಲ್ಲಿ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎಂದು ಹೇಳಿದರು.
ಮಂಗಳವಾರ ರಾತ್ರಿ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ದೇವೇಗೌಡರನ್ನು ಓಲ್ಡ್ ಏರ್‌ಪೋರ್ಟ್ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಡಾ. ಸುದರ್ಶನ್ ಬಲ್ಲಾಳ್ ನೇತೃತ್ವದ ವೈದ್ಯರ ತಂಡ ಅವರು ಚಿಕಿತ್ಸೆಯನ್ನು ನೀಡುತ್ತಿದ್ದಾರೆ. ಆಸ್ಪತ್ರೆಯು ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿನ್ ಪ್ರಕಾರ, ದೇವೇಗೌಡರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಚೇತರಿಕೆ ಪ್ರಕ್ರಿಯೆ ಸುಗಮವಾಗಿ ನಡೆಯುತ್ತಿದೆ.
ದೇವೇಗೌಡರು ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆಯೇ ಪುತ್ರ ರೇವಣ್ಣ ತುರ್ತಾಗಿ ಆಗಮಿಸಿ ಆರೋಗ್ಯ ವಿಚಾರಿಸಿದರು. ನಂತರ ಜೆಡಿಎಸ್ ಶಾಸಕ ಜಿಟಿ ದೇವೇಗೌಡರೂ ಆಸ್ಪತ್ರೆಗೆ ಭೇಟಿ ನೀಡಿ ದೇವೇಗೌಡರ ಆರೋಗ್ಯ ಸ್ಥಿತಿಯನ್ನು ವಿಚಾರಿಸಿದರು. ಕುಟುಂಬದವರು ಮತ್ತು ವೈದ್ಯರು ಆತಂಕ ಪಡುವ ಅಗತ್ಯವಿಲ್ಲವೆಂದು ಸಾರ್ವಜನಿಕರಿಗೆ ಭರವಸೆ ನೀಡಿದ್ದಾರೆ.
ವರದಿ: ರಂಜಿತ ರೇವಣ್ಣ ನಾಟನಹಳ್ಳಿ