ಬಂಗಾಳಕೊಲ್ಲಿಯಲ್ಲಿ ವಾಯು ಚಂಡಮಾರುತದ ಪ್ರಭಾವದಿಂದ ತಮಿಳುನಾಡು ಮತ್ತು ಕರ್ನಾಟಕದಲ್ಲಿ ಈಶಾನ್ಯ ಮಾನ್ಸೂನ್ ತೀವ್ರಗೊಂಡಿದೆ. ಮುಂದಿನ ಕೆಲವು ದಿನಗಳಲ್ಲಿ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ರಾತ್ರಿ ಮಳೆಯು ಮುಂದುವರಿದು, ಬೆಳಗಿನ ಜಾವ ಹಲವು ಪ್ರದೇಶಗಳಲ್ಲಿ ನೀರು ನಿಂತು ಸಂಚಾರಕ್ಕೆ ಅಡಚಣೆಯಾಯಿತು. ಕೆಆರ್ ಮಾರುಕಟ್ಟೆ ಸೇರಿದಂತೆ ಪ್ರಮುಖ ವ್ಯಾಪಾರ ಪ್ರದೇಶಗಳಲ್ಲಿ ನೀರು ನಿಂತು ದೀಪಾವಳಿ ಖರೀದಿಗೆ ಅಡ್ಡಿಯಾಯಿತು. ಮಳೆಯ ನಡುವೆಯೂ ನಾಗರಿಕರು ಹಬ್ಬದ ಸಿದ್ಧತೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ಅಕ್ಟೋಬರ್ 23 ರಿಂದ 25ರವರೆಗೆ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆಯಿದ್ದು, ಕೆಲವು ಭಾಗಗಳಲ್ಲಿ ಆರೆಂಜ್ ಅಲರ್ಟ್ ಪ್ರಕಟಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಕ್ಟೋಬರ್ 22 ರಿಂದ 24 ವರೆಗೆ ಗುಡುಗು, ಮಿಂಚು ಹಾಗೂ ಬಿರುಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ.
ಮಳೆಯ ಪ್ರಮಾಣವು 115.6 ಮಿಮೀ.ರಿಂದ 204.4 ಮಿಮೀ.ವರೆಗೆ ದಾಖಲಾಗುವ ಸಾಧ್ಯತೆಯಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಅಕ್ಟೋಬರ್ 24ರಿಂದ ಮಳೆಯ ತೀವ್ರತೆ ನಿಧಾನವಾಗಿ ಕಡಿಮೆಯಾಗುವ ನಿರೀಕ್ಷೆಯಿದೆ.
ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಅಕ್ಟೋಬರ್ 22 ಮತ್ತು 24 ರಂದು ಯೆಲ್ಲೋ ಅಲರ್ಟ್ ಜಾರಿಯಲ್ಲಿದೆ. ಈ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದ್ದು, ಮಿಂಚು ಮತ್ತು ಬಿರುಗಾಳಿಯ ಗಾಳಿಯು ಪ್ರಮುಖ ಹವಾಮಾನ ಅಪಾಯಗಳಾಗಿ ಉಳಿಯುವ ಸಾಧ್ಯತೆ ಇದೆ.
ಬೆಂಗಳೂರು, ಮೈಸೂರು, ರಾಮನಗರ, ಹಾಸನ, ಕೊಡಗು, ಚಿಕ್ಕಮಗಳೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಅಕ್ಟೋಬರ್ 22ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ. 115 ಮಿಮೀ.ಗಿಂತ ಅಧಿಕ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಮಳೆಯ ಪರಿಣಾಮವಾಗಿ ಬೆಂಗಳೂರಿನಲ್ಲಿ ಮತ್ತು ಮೈಸೂರಿನಲ್ಲಿ ನಗರ ಪ್ರವಾಹ ಸಂಭವಿಸಬಹುದು. ಕೊಡಗು ಮತ್ತು ಚಿಕ್ಕಮಗಳೂರಿನ ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತದ ಅಪಾಯವಿದೆ.
ವರದಿ : ಲಾವಣ್ಯ ಅನಿಗೋಳ

