ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯ ಹಿರೇನಾಗವೇಲಿ ಬಳಿ ಸೋಮವಾರ ಮಧ್ಯ ರಾತ್ರಿ ಜಿಲೇಟಿನ್ ಸ್ಫೋಟ ಗೊಂಡಿದ್ದು, ಆರು ಜನ ಮೃತ ಪಟ್ಟಿದ್ದಾರೆ.
ಘಟನ ಸ್ಥಳಕ್ಕೆ ಗೃಹ ಸಚಿವ ಬಸವರಾಜ್ ಬೊಮ್ಮಯಿ ಭೇಟಿ ನೀಡಿ ಘಟನಾ ಸ್ಥಳದಲ್ಲಿನ ವಾಸ್ತವ ಸ್ಥಿತಿಯನ್ನು ಪರಿಶೀಲನೆ ನಡೆಸಿದರು. ಘಟನೆಗೆ ನಿಖರ ಕಾರಣವೇನು ಎಂಬುದನ್ನು ಜಿಲ್ಲೆಯ ಪೊಲೀಸ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳಿಂದ ಘಟನೆ ಕುರಿತು ಮಾಹಿತಿ ಪಡೆದರು.
ಗೃಹ ಸಚಿವ ಬಸವರಾಜ್ ಬೊಮ್ಮಯಿ ಮಾತನಾಡಿ, ಜಿಲೇಟಿನ್ ಸ್ಫೋಟ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ನಿಷ್ಪಕ್ಷಪಾತವಾಗಿ ತನಿಕೆ ನಡೆಯಲಿದೆ. ಪ್ರಕರಣವನ್ನು ಸಿಐಡಿಗೆ ವಹಿಸಲಾಗುವುದು. ಸಿಐಡಿ ವರದಿ ಬಂದ 24 ಗಂಟೆ ಒಳಗೆ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಹೇಳಿದ ಇವರು, ಘಟನೆಯಲ್ಲಿ ಮೃತ ಪಟ್ಟ ಕುಟುಂಬದವರಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಆರೋಗ್ಯ ಸಚಿವ ಡಾ. ಸುಧಾಕರ್ ಉಪಸ್ಥಿತರಿದ್ದರು.
ಘಟನ ಸ್ಥಳಕ್ಕೆ ಹಿರಿಯ ಪೊಲೀಸ್ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಜಿಲೇಟಿನ್ ಸ್ಫೋಟದ ಕುರಿತು ಪರಿಶೀಲಿಸಿದರು.
ಕಳೆದ ತಿಂಗಳು ಜನವರಿ ೨೨ ರಂದು ಶಿವಮೊಗ್ಗ ಜಿಲ್ಲೆಯ ಹುಣಸೋಡು ಗ್ರಾಮದ ಕ್ರಷರ್‌ನಲ್ಲಿ ಜಿಲೇಟಿನ್ ಸ್ಫೋಟಗೊಂಡು ೧೫ಕ್ಕೂ ಹೆಚ್ಚು ಅಮಾಯಕರು ಪ್ರಾಣ ಕಳೆದುಕೊಂಡಿದ್ದರು.