Hubli News: ಹುಬ್ಬಳ್ಳಿಯ ತಾರಿಹಾಳ ಗ್ರಾಮದಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಹೆಲ್ಮೆಟ್‌ನಿಂದ ಹಲ್ಲೆ ನಡೆಸಿ ಪತ್ನಿಯನ್ನೇ ಪತಿ ಕೊಲೆ ಮಾಡಿರುವ ಘಟನೆ ನಡೆದಿದ್ದು, ಮದುವೆಯಾಗಿ ಕೇವಲ ಐದು ತಿಂಗಳಲ್ಲೇ ನವವಿವಾಹಿತೆಯ ಬದುಕು ಅಂತ್ಯವಾಗಿದೆ.
ಹುಬ್ಬಳ್ಳಿಯ ತಾರಿಹಾಳ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ನವಲಗುಂದ ತಾಲೂಕಿನ ಇಬ್ರಾಹಿಂಪುರ ಗ್ರಾಮದ 19 ವರ್ಷದ ನಾಗರತ್ನ ಹಳೆಮನಿ ಕೊಲೆಯಾದ ನವವಿವಾಹಿತೆ. ಕಳೆದ ಫೆಬ್ರವರಿಯಲ್ಲಿ ಶಿವರಾಜ್ ಹಾಗೂ ನಾಗರತ್ನ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.
ಭಾನುವಾರ ಬೆಳಿಗ್ಗೆ ಗಂಡ-ಹೆಂಡತಿ ನಡುವೆ ಆರಂಭವಾದ ಜಗಳ ತೀವ್ರ ಸ್ವರೂಪ ಪಡೆದಿದೆ. ಈ ವೇಳೆ ಪತಿ ಶಿವರಾಜ್, ಹೆಲ್ಮೆಟ್‌ನಿಂದ ಪತ್ನಿಯ ತಲೆಗೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ನಾಗರತ್ನ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಕೌಟುಂಬಿಕ ಕಲಹವೇ ಕೊಲೆಗೆ ಕಾರಣವೇ ಅಥವಾ ಬೇರೆ ಯಾವುದೇ ಹಿನ್ನೆಲೆ ಇದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆ ತಾರಿಹಾಳ ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಟಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕೊಲೆಯ ನಿಖರ ಕಾರಣವನ್ನು ಪತ್ತೆಹಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ.




