Hubli News: ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಬರ್ಬರ ಕೊಲೆ ಪ್ರಕರಣದಲ್ಲಿ ಕೊನೆಗೂ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ. ಕೊಲೆ ಅಪರಾಧಿ ಗಿರೀಶ್ ಅಲಿಯಾಸ್ ವಿಶ್ವನಾಥ ಸಾವಂತ್‌ಗೆ ಜೀವಾವಧಿ ಶಿಕ್ಷೆ ವಿಧಿಸಿ ಹುಬ್ಬಳ್ಳಿಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ಅಲ್ಲದೆ 45 ಸಾವಿರ ರೂಪಾಯಿ ದಂಡ ವಿಧಿಸಿದ್ದು, ಇದರಲ್ಲಿ 42 ಸಾವಿರ ರೂಪಾಯಿ ಅಂಜಲಿ ಕುಟುಂಬಕ್ಕೆ ಪರಿಹಾರವಾಗಿ ನೀಡಲು ಆದೇಶಿಸಲಾಗಿದೆ.
ಇಡೀ ಹುಬ್ಬಳ್ಳಿಯನ್ನೇ ಬೆಚ್ಚಿಬೀಳಿಸಿದ್ದ 20 ವರ್ಷದ ಅಂಜಲಿ ಅಂಬಿಗೇರ ಕೊಲೆ ಪ್ರಕರಣದಲ್ಲಿ ಕೊನೆಗೂ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
2024ರ ಮೇ 15ರಂದು ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಈ ಭೀಕರ ಹತ್ಯೆ ನಡೆದಿತ್ತು. ಮನೆಯಲ್ಲಿ ಮಲಗಿದ್ದ ಅಂಜಲಿಯನ್ನು ಎಬ್ಬಿಸಿ, ಚಾಕುವಿನಿಂದ ಮನಬಂದಂತೆ ಇರಿದು ಗಿರೀಶ್ ಅಲಿಯಾಸ್ ವಿಶ್ವನಾಥ ಸಾವಂತ್ ಬರ್ಬರವಾಗಿ ಹತ್ಯೆ ಮಾಡಿದ್ದ.
ಈ ಘಟನೆ ರಾಜ್ಯಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಪ್ರಕರಣದ ಗಂಭೀರತೆ ಅರಿತ ರಾಜ್ಯ ಸರ್ಕಾರ ತನಿಖೆಯನ್ನು ಸಿಐಡಿಗೆ ವಹಿಸಿತ್ತು. ತನಿಖೆ ನಡೆಸಿದ ಸಿಐಡಿ ಅಧಿಕಾರಿಗಳು ಸಾಕ್ಷ್ಯಾಧಾರಗಳನ್ನು ಕಲೆಹಾಕಿ ಬರೋಬ್ಬರಿ 494 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಸುದೀರ್ಘ ವಿಚಾರಣೆ ಬಳಿಕ ಆರೋಪಿಯ ಮೇಲಿನ ಕೊಲೆ ಅಪರಾಧ ಸಾಬೀತಾಗಿತ್ತು. ಇದೀಗ ಹುಬ್ಬಳ್ಳಿಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಪಲ್ಲವಿ ಬಿ.ಆರ್. ಅವರು ಗಿರೀಶ್ ಅಲಿಯಾಸ್ ವಿಶ್ವನಾಥ ಸಾವಂತ್‌ಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.
ಅಲ್ಲದೆ ಒಟ್ಟು 45 ಸಾವಿರ ರೂಪಾಯಿ ದಂಡ ವಿಧಿಸಿದ್ದು, ಈ ಪೈಕಿ 42 ಸಾವಿರ ರೂಪಾಯಿಗಳನ್ನು ಅಂಜಲಿ ಕುಟುಂಬಕ್ಕೆ ಪರಿಹಾರವಾಗಿ ನೀಡಲು ಹಾಗೂ ಉಳಿದ 3 ಸಾವಿರ ರೂಪಾಯಿಗಳನ್ನು ನ್ಯಾಯಾಲಯಕ್ಕೆ ದಂಡವಾಗಿ ಪಾವತಿಸಲು ಆದೇಶಿಸಿದ್ದಾರೆ.
ಒಟ್ಟಿನಲ್ಲಿ ಅಂಜಲಿ ಕುಟುಂಬಸ್ಥರು ಹಾಗೂ ಸಾರ್ವಜನಿಕರು ಬಹುದಿನಗಳಿಂದ ಕಾಯುತ್ತಿದ್ದ ತೀರ್ಪು ಹೊರಬಿದ್ದಿದೆ. ಬರ್ಬರ ಹತ್ಯೆ ಪ್ರಕರಣದ ಅಪರಾಧಿಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿದ್ದು, ನ್ಯಾಯಾಲಯದ ತೀರ್ಪಿನಿಂದ ಅಂಜಲಿ ಕುಟುಂಬಕ್ಕೆ ನ್ಯಾಯದ ನಿರೀಕ್ಷೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ.




