Hubli News: ಅಂಜಲಿ ಅಂಬಿಗೇರ ಕೊಲೆ ಪ್ರಕರಣ – ಒಂದೂವರೆ ವರ್ಷದ ಬಳಿಕ ಆರೋಪಿಗೆ ಅಪರಾಧಿ ಪಟ್ಟ

Hubli News: ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಕೊನೆಗೂ ಮಹತ್ವದ ತಿರುವು ಸಿಕ್ಕಿದೆ. ಪ್ರೀತಿಸುವಂತೆ ಪೀಡಿಸಿ, ಪ್ರೀತಿಯನ್ನು ನಿರಾಕರಿಸಿದ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಆರೋಪಿ ಗಿರೀಶ್ ಅಲಿಯಾಸ್ ವಿಶ್ವನಾಥ ಸಾವಂತ್ ಇದೀಗ ಅಪರಾಧಿ ಎಂದು ಸಾಬೀತಾಗಿದೆ. ಪ್ರಕರಣ ನಡೆದ ಒಂದೂವರೆ ವರ್ಷದ ಬಳಿಕ ನ್ಯಾಯಾಲಯ ಮಹತ್ವದ ತೀರ್ಪು ನೀಡಿದ್ದು, ಶಿಕ್ಷೆಯ ಪ್ರಮಾಣವನ್ನು ಇದೇ 25ರಂದು ಪ್ರಕಟಿಸಲಿದೆ.

ಪ್ರೀತಿಯ ಹೆಸರಿನಲ್ಲಿ ಯುವತಿಯೊಬ್ಬಳ ಬದುಕನ್ನೇ ಅಂತ್ಯಗೊಳಿಸಿದ್ದ ಪಾತಕಿಗೆ ನ್ಯಾಯಾಲಯದಲ್ಲಿ ಮತ್ತೊಂದು ಸುತ್ತಿನ ಕಾನೂನು ಕುಣಿಕೆ ಬಿಗಿದಿದೆ. ಹುಬ್ಬಳ್ಳಿಯ ಯಲ್ಲಾಪುರ ಓಣಿಯ ನಿವಾಸಿಯಾಗಿದ್ದ ಗಿರೀಶ್ ಅಲಿಯಾಸ್ ವಿಶ್ವನಾಥ ಸಾವಂತ್, ಅಂಜಲಿ ಅಂಬಿಗೇರಳನ್ನು ಪ್ರೀತಿಸುವಂತೆ ನಿರಂತರವಾಗಿ ಪೀಡಿಸುತ್ತಿದ್ದ. ಆದರೆ ಆತನ ಪ್ರೀತಿಯ ಪ್ರಸ್ತಾಪವನ್ನು ಅಂಜಲಿ ನಿರಾಕರಿಸಿದ್ದಳು. ಇದರಿಂದ ಆಕ್ರೋಶಗೊಂಡಿದ್ದ ಆರೋಪಿ, 2024ರ ಮೇ 15ರಂದು ಬೆಳಗಿನ ಜಾವ 5ರಿಂದ 5.30ರ ನಡುವೆ ವೀರಾಪುರ ಓಣಿಯಲ್ಲಿರುವ ಅಂಜಲಿ ಮನೆಗೆ ನುಗ್ಗಿ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದ.

ಈ ಸಂಬಂಧ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲಾಗಿತ್ತು. ತನಿಖೆ ಕೈಗೆತ್ತಿಕೊಂಡ ಸಿಐಡಿ ಅಧಿಕಾರಿಗಳು ಆರೋಪಿಯನ್ನು ಬಂಧಿಸಿ, ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ 435 ಪುಟಗಳ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದಿದ್ದು, ನ್ಯಾಯಾಧೀಶೆ ಪಲ್ಲವಿ ಅವರು ಮಹತ್ವದ ತೀರ್ಪು ಪ್ರಕಟಿಸಿದ್ದಾರೆ. ಉಪ ಕಾರಾಗೃಹದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾದ ಆರೋಪಿ ಗಿರೀಶ್ ಸಾವಂತನನ್ನು ಐಪಿಸಿ ಸೆಕ್ಷನ್ 451, 302 ಹಾಗೂ 201ರ ಅಡಿಯಲ್ಲಿ ಅಪರಾಧಿ ಎಂದು ಘೋಷಿಸಿದ್ದಾರೆ.

ಇನ್ನು ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಅಂದಿನ ಡಿಜಿಪಿ ಮತ್ತು ಐಜಿಪಿ ಡಾ. ಎಂ.ಎ. ಸಲೀಂ ಹಾಗೂ ಎಡಿಜಿಪಿ ಬಿ.ಕೆ. ಸಿಂಗ್ ಅವರ ನಿರ್ದೇಶನದಂತೆ ತನಿಖೆ ನಡೆದಿತ್ತು. ಎಸ್ಪಿ ಎನ್. ವೆಂಕಟೇಶ ಅವರ ಮೇಲ್ವಿಚಾರಣೆಯಲ್ಲಿ ಡಿವೈಎಸ್‌ಪಿ ಎಂ.ಎಚ್. ಉಮೇಶ ತನಿಖೆ ನಡೆಸಿದ್ದರು. ಪ್ರಕರಣದಲ್ಲಿ 85 ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಲಾಗಿತ್ತು. ವಿಚಾರಣೆ ವೇಳೆ ಒಟ್ಟು 46 ಸಾಕ್ಷಿಗಳನ್ನು ನ್ಯಾಯಾಲಯದಲ್ಲಿ ವಿಚಾರಣೆಗೊಳಪಡಿಸಲಾಗಿದ್ದು, 179 ದಾಖಲೆಗಳು ಹಾಗೂ 18 ವಸ್ತುಗಳನ್ನು ಸಾಕ್ಷ್ಯವಾಗಿ ಹಾಜರುಪಡಿಸಲಾಗಿತ್ತು. ಸರ್ಕಾರದ ಪರ ವಿಶೇಷ ಸರ್ಕಾರಿ ಅಭಿಯೋಜಕ ಆರ್.ಕೆ. ಕಾಳೆ ವಾದ ಮಂಡಿಸಿದ್ದರು.

ಒಟ್ಟಿನಲ್ಲಿ, ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಅಂಜಲಿ ಅಂಬಿಗೇರ ಕೊಲೆ ಪ್ರಕರಣದಲ್ಲಿ ಆರೋಪಿ ಅಪರಾಧಿ ಎಂದು ನ್ಯಾಯಾಲಯ ಘೋಷಿಸಿದೆ. ಆದರೆ ಈಗ ಎಲ್ಲರ ಕುತೂಹಲ ಶಿಕ್ಷೆಯ ಪ್ರಮಾಣದ ಮೇಲಿದೆ. ಇದೇ ನವೆಂಬರ್ 25ರಂದು ನ್ಯಾಯಾಲಯ ಶಿಕ್ಷೆ ಪ್ರಕಟಿಸಲಿದ್ದು, ಅಂಜಲಿ ಕುಟುಂಬಕ್ಕೆ ನ್ಯಾಯ ಸಿಗುವ ನಿರೀಕ್ಷೆ ಮತ್ತಷ್ಟು ಹೆಚ್ಚಾಗಿದೆ.

About The Author