Hubli News: ರಾಜ್ಯ ಸರ್ಕಾರದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಯೋಜನೆ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ವಿವಿಧ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಲಾಯಿತು.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಯೋಜನೆ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಹುಬ್ಬಳ್ಳಿಯ ಕನಕದಾಸ, ಕಾಡಸಿದ್ದೇಶ್ವರ ಹಾಗೂ ಪಿಸಿ ಜಾಬಿನ್ ಕಾಲೇಜುಗಳಲ್ಲಿ ವಿಶೇಷ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ರಜತ್ ಉಳ್ಳಾಗಡ್ಡಿಮಠ ಅವರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಶಿಕ್ಷಣ ಹಾಗೂ ಯುವ ಸಬಲೀಕರಣಕ್ಕೆ ವಿಶೇಷ ಆದ್ಯತೆ ನೀಡುತ್ತಿದ್ದು, ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಯೋಜನೆ ಅದಕ್ಕೆ ಉತ್ತಮ ಉದಾಹರಣೆಯಾಗಿದೆ ಎಂದು ಹೇಳಿದರು.
ಈ ಯೋಜನೆಯಿಂದ ರಾಜ್ಯದ ಕೋಟ್ಯಂತರ ವಿದ್ಯಾರ್ಥಿಗಳ ಆರ್ಥಿಕ ಹೊರೆ ಕಡಿಮೆಯಾಗಲಿದ್ದು, ಶಿಕ್ಷಣ ಪಡೆಯಲು ಮತ್ತಷ್ಟು ಅನುಕೂಲವಾಗಲಿದೆ. ಇದು ಕೇವಲ ಒಂದು ಯೋಜನೆಯಲ್ಲ, ಯುವ ಕರ್ನಾಟಕ ನಿರ್ಮಾಣದತ್ತ ಇಡಲಾಗಿರುವ ಮಹತ್ವದ ಹೆಜ್ಜೆಯಾಗಿದೆ ಎಂದು ಅಭಿಪ್ರಾಯಪಟ್ಟರು. ಶಾಲಾ ಹಂತದಿಂದ ಸ್ನಾತಕೋತ್ತರ ಪದವಿವರೆಗೆ ಎಲ್ಲ ವಿದ್ಯಾರ್ಥಿಗಳಿಗೆ ಈ ಸೌಲಭ್ಯ ಲಭ್ಯವಿದ್ದು, ಸೇವಾ ಸಿಂಧು ಪೋರ್ಟಲ್ ಅಥವಾ ಸಂಬಂಧಿಸಿದ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಈಗಾಗಲೇ ಬಸ್ ಪಾಸ್‌ಗೆ ಶುಲ್ಕ ಪಾವತಿಸಿರುವ ವಿದ್ಯಾರ್ಥಿಗಳಿಗೆ ಹಣ ಮರುಪಾವತಿ ಮಾಡಲಾಗುವುದು ಎಂದು ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಶಿಕ್ಷಣದ ಮೂಲಕ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವ ಜೊತೆಗೆ ರಾಜ್ಯದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ವೀರೇಶ್ ಕಡಕೋಳಮಠ, ಸಂಗಮೇಶ್ ಗೌರಕ್ಕನವರ, ಸಾದಿಕ್ ಯಕ್ಕುಂಡಿ, ಷರೀಫ್ ಗರ್ಗದ, ಬಾಳಮ್ಮ ಜಂಗನವರ್, ಸಂತೋಷ್ ನಾಯಕ್, ಸೈಫ್ ಯರ್ಗಟ್ಟಿ, ಉಮೇಶ್ ಕೊಟ್ಟರೆಣ್ಣವರ್, ಕಲಾವತಿ ದತ್ತವಾದ ಸೇರಿದಂತೆ ಕಾಲೇಜುಗಳ ಪ್ರಾಂಶುಪಾಲರು, ಬೋಧಕ ವರ್ಗ ಹಾಗೂ ಅಪಾರ ಸಂಖ್ಯೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.




