Hubli News: SIR ಡ್ಯೂಟಿ ವಿವಾದಕ್ಕೆ ಬಿಗ್‌ ಟ್ವಿಸ್ಟ್? ಕೊನೆಗೂ ಮಂಡಿಯೂರಿದ ʼಶರತ್ʼ

Hubli News: ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳ ವಿರುದ್ಧ ಗುತ್ತಿಗೆದಾರ ಶರತ್ ದೊಡ್ಡಮನಿ ಮಾಡಿದ್ದ ಆರೋಪ ಭಾರೀ ವಿವಾದಕ್ಕೆ ಕಾರಣವಾಗಿದೆ. ಆರೋಪಗಳನ್ನು ತೀವ್ರವಾಗಿ ಖಂಡಿಸಿದ ಪಾಲಿಕೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಪ್ರತಿಭಟನೆ ನಡೆಸಿ, ಶರತ್ ದೊಡ್ಡಮನಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಒತ್ತಾಯಿಸಿದರು. ಬಳಿಕ ಆಯುಕ್ತರು, ಪೊಲೀಸ್ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ಸಂಘದ ಮಧ್ಯಸ್ಥಿಕೆಯಲ್ಲಿ ಶರತ್ ದೊಡ್ಡಮನಿ ಕ್ಷಮೆಯಾಚನೆ ಮಾಡಿದ ನಂತರ ಪ್ರತಿಭಟನೆ ಕೈಬಿಡಲಾಯಿತು.

ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳು SIR ಕರ್ತವ್ಯದ ವೇಳೆ ಸಾವಜಿ ಹೋಟೆಲ್ ಬಾರ್‌ನಲ್ಲಿ ಇರುತ್ತಾರೆ ಎಂದು ಗುತ್ತಿಗೆದಾರ ಶರತ್ ದೊಡ್ಡಮನಿ ಮಾಡಿರುವ ಆರೋಪವನ್ನು ಖಂಡಿಸಿ ಪಾಲಿಕೆ ಅಧಿಕಾರಿಗಳು ಹಾಗೂ ಸಿಬ್ಬಂದಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ ಅಧಿಕಾರಿಗಳು, ತಮ್ಮ ವಿರುದ್ಧದ ಆರೋಪಗಳು ಸಂಪೂರ್ಣ ನಿರಾಧಾರವಾಗಿದ್ದು, ಯಾವುದೇ ಸಾಕ್ಷ್ಯಾಧಾರವಿಲ್ಲದೆ ಸರ್ಕಾರಿ ಅಧಿಕಾರಿಗಳ ಗೌರವಕ್ಕೆ ಧಕ್ಕೆ ತರುವ ರೀತಿಯಲ್ಲಿ ಹೇಳಿಕೆಗಳನ್ನು ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ, ಶರತ್ ದೊಡ್ಡಮನಿ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಎಂದು ಒತ್ತಾಯಿಸಿ ಪಾಲಿಕೆ ಸಿಬ್ಬಂದಿ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದರು. ಸುಳ್ಳು ಆರೋಪಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ಬಳಿಕ ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಆಯುಕ್ತರು, ಪೊಲೀಸ್ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ಸಂಘದ ಅಧ್ಯಕ್ಷ ಪಂಪಣ್ಣ ಮಧ್ಯಸ್ಥಿಕೆ ವಹಿಸಿ ಶರತ್ ದೊಡ್ಡಮನಿ ಅವರನ್ನು ಸ್ಥಳಕ್ಕೆ ಕರೆಸಿದರು. ಅಧಿಕಾರಿಗಳ ಎದುರು ಶರತ್ ದೊಡ್ಡಮನಿ ಕ್ಷಮೆಯಾಚನೆ ಮಾಡಿದ್ದು, ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆ ಮರುಕಳಿಸದಂತೆ ನಡೆದುಕೊಳ್ಳುವುದಾಗಿ ಭರವಸೆ ನೀಡಿದರು. ಇದರೊಂದಿಗೆ ಪಾಲಿಕೆ ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ಪ್ರತಿಭಟನೆಯನ್ನು ಹಿಂಪಡೆದರು.

ಪಾಲಿಕೆ ಅಧಿಕಾರಿಗಳ ವಿರುದ್ಧದ ಆರೋಪದಿಂದ ಆರಂಭವಾದ ವಿವಾದ ತೀವ್ರ ಪ್ರತಿಭಟನೆಗೆ ಕಾರಣವಾಗಿತ್ತು. ಆದರೆ ಆಯುಕ್ತರು, ಪೊಲೀಸ್ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ಸಂಘದ ಮಧ್ಯಸ್ಥಿಕೆಯಲ್ಲಿ ಗುತ್ತಿಗೆದಾರ ಶರತ್ ದೊಡ್ಡಮನಿ ಕ್ಷಮೆಯಾಚನೆ ಮಾಡಿ, ಇಂತಹ ಘಟನೆ ಮರುಕಳಿಸದಂತೆ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪಾಲಿಕೆ ಸಿಬ್ಬಂದಿ ಪ್ರತಿಭಟನೆಯನ್ನು ಕೈಬಿಟ್ಟಿದ್ದು, ಸದ್ಯಕ್ಕೆ ವಿವಾದ ಸುಖಾಂತ್ಯ ಕಂಡಿದೆ.‌

About The Author