Hubli News: ಅನುದಾನಿತ ಶಾಲೆಗಳ ಸಮಸ್ಯೆ ಬಗೆಹರಿಸಲು ಸರ್ಕಾರಕ್ಕೆ ಗಡುವು: ಬಸವರಾಜ ಹೊರಟ್ಟಿ

Hubli News: ಖಾಸಗಿ ಅನುದಾನಿತ ಶಾಲೆಗಳ ಸಮಸ್ಯೆ ಬಗೆಹರಿಸಲು ಸರ್ಕಾರಕ್ಕೆ ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಗಡುವು ನೀಡಿದ್ದಾರೆ. ಸರ್ಕಾರ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ನವೆಂಬರ್ 3ರಿಂದ ರಾಜ್ಯದ ಎಲ್ಲಾ ಖಾಸಗಿ ಅನುದಾನಿತ ಶಾಲೆಗಳನ್ನು ಬಂದ್ ಮಾಡಿ ಅನಿರ್ದಿಷ್ಟಾವಧಿ ಹೋರಾಟ ನಡೆಸುವುದಾಗಿ ಹೊರಟ್ಟಿ ಎಚ್ಚರಿಕೆ ನೀಡಿದ್ದಾರೆ.

ಖಾಸಗಿ ಅನುದಾನಿತ ಶಾಲೆಗಳ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಸರ್ಕಾರವನ್ನು ಆಗ್ರಹಿಸಿದ್ದಾರೆ. ಉತ್ತರ ಕರ್ನಾಟಕದಲ್ಲಿ ಶೇ.69ರಷ್ಟು ಖಾಸಗಿ ಅನುದಾನಿತ ಶಾಲಾ-ಕಾಲೇಜುಗಳಿವೆ ಎಂದು ಹೊರಟ್ಟಿ ಹೇಳಿದ್ದಾರೆ.

ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಸರ್ಕಾರ ಅನುಮತಿ ನೀಡುತ್ತಿಲ್ಲ ಎಂದು ಹೊರಟ್ಟಿ ಆರೋಪಿಸಿದ್ದಾರೆ. ಇದರ ಜೊತೆಗೆ ಶಾಲೆಗಳಲ್ಲಿ ನಿರ್ದಿಷ್ಟ ಸಂಖ್ಯೆಯ ವಿದ್ಯಾರ್ಥಿಗಳಿರಬೇಕು ಎಂಬ ನಿಯಮಗಳನ್ನು ವಿಧಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಸರ್ಕಾರದ ನಿಯಮಗಳಿಂದ ವಿಶೇಷವಾಗಿ ಕನ್ನಡ ಮಾಧ್ಯಮದ ಅನುದಾನಿತ ಶಾಲೆಗಳು ಸಂಕಷ್ಟಕ್ಕೆ ಸಿಲುಕಿವೆ.
ಹಲವು ಶಾಲೆಗಳು ಮುಚ್ಚುವ ಹಂತಕ್ಕೆ ಬಂದಿವೆ ಎಂದು ಹೊರಟ್ಟಿ ಆತಂಕ ವ್ಯಕ್ತಪಡಿಸಿದ್ದಾರೆ.

ಉತ್ತರ ಕರ್ನಾಟಕಕ್ಕೆ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದೆ ಎಂದು ಹೊರಟ್ಟಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಿಕ್ಷಣ ಕ್ಷೇತ್ರದ ಪರಿಸ್ಥಿತಿ ಹದಗೆಟ್ಟಿದೆ ಎಂದು ಟೀಕಿಸಿರುವ ಅವರು, ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರಿಗೆ ಶಿಕ್ಷಣದ ಬಗ್ಗೆ ಆಸಕ್ತಿ ಇಲ್ಲ ಎಂದು ಆರೋಪಿಸಿದ್ದಾರೆ.

ಅನುದಾನಿತ ಶಾಲೆಗಳ ಬೇಡಿಕೆಗಳಿಗೆ ಸರ್ಕಾರ ಕೂಡಲೇ ಸ್ಪಂದಿಸಬೇಕು ಎಂದು ಹೊರಟ್ಟಿ ಆಗ್ರಹಿಸಿದ್ದಾರೆ.
ಸರ್ಕಾರ ಸಮಸ್ಯೆ ಬಗೆಹರಿಸದಿದ್ದರೆ ನವೆಂಬರ್ 3ರಿಂದ ರಾಜ್ಯದ ಎಲ್ಲಾ ಖಾಸಗಿ ಅನುದಾನಿತ ಶಾಲೆಗಳನ್ನು ಬಂದ್ ಮಾಡಿ ಅನಿರ್ದಿಷ್ಟಾವಧಿ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

About The Author