Hubli News: ಹುಬ್ಬಳ್ಳಿಯಲ್ಲಿ ಬೀದಿ ನಾಯಿಗಳ ಹಾವಳಿ ಮತ್ತೆ ಆತಂಕ ಮೂಡಿಸಿದೆ. ಬಾಲಕನ ಮೇಲೆ ಬೀದಿ ನಾಯಿಗಳು ಏಕಾಏಕಿ ದಾಳಿ ಮಾಡಿದ್ದು, ದಾಳಿ ಮಾಡುವ ಎದೆ ಝಲ್ ಎನ್ನಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಾಯಿಗಳ ದಾಳಿಯಿಂದ ಬಾಲಕ ಗಂಭೀರವಾಗಿ ಗಾಯಗೊಂಡಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಹುಬ್ಬಳ್ಳಿಯ ಅಲ್ತಾಫ್ ಪ್ಲಾಟ್‌ನಲ್ಲಿ ಈ ಘಟನೆ ನಡೆದಿದೆ. ಅಜಾನ್ ಮೊಹಮ್ಮದ್ ಅಲಿ ಹುರಳಿಕುಪ್ಪಿ ಎಂಬ ಬಾಲಕನ ಮೇಲೆ ಏಕಾಏಕಿ ಬೀದಿ ನಾಯಿಗಳು ದಾಳಿ ನಡೆಸಿವೆ. ಬಾಲಕನ ಸುತ್ತುವರಿದ ನಾಯಿಗಳು ದಾಳಿ ಮಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ನಾಯಿಗಳು ಬಾಲಕನ ಮುಖ ಹಾಗೂ ದೇಹದ ವಿವಿಧ ಭಾಗಗಳಿಗೆ ಕಚ್ಚಿವೆ. ದಾಳಿಯಿಂದ ಬಾಲಕ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸದ್ಯ ಬಾಲಕ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಘಟನೆ ಬಳಿಕ ಅಲ್ತಾಫ್ ಪ್ಲಾಟ್ ನಿವಾಸಿಗಳಲ್ಲಿ ಆತಂಕ ಹೆಚ್ಚಾಗಿದೆ.
ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿರುವ ಆರೋಪಗಳ ನಡುವೆಯೇ ಬಾಲಕನ ಮೇಲೆ ನಡೆದ ಈ ದಾಳಿ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಬೀದಿ ನಾಯಿಗಳ ನಿಯಂತ್ರಣಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಕೇಳಿಬಂದಿದೆ.




