Hubli News: ಸಾವಿನ ಹೆದ್ದಾರಿ ಎಂದೇ ಕುಖ್ಯಾತಿ ಪಡೆದಿರುವ ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆಯಲ್ಲಿ ಅಪಘಾತಗಳ ಸರಣಿ ಮುಂದುವರಿದಿದ್ದರೂ, ರಸ್ತೆ ಅಗಲೀಕರಣ ಕಾಮಗಾರಿ ಮಾತ್ರ ನಿರೀಕ್ಷಿತ ವೇಗದಲ್ಲಿ ಸಾಗುತ್ತಿಲ್ಲ. ನೂರಾರು ಜೀವಗಳನ್ನು ಬಲಿ ಪಡೆದಿರುವ ಈ ರಸ್ತೆಯ ಕಾಮಗಾರಿ ವಿಳಂಬ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.
ಇದು ಕೇವಲ ಒಂದು ರಸ್ತೆ ಅಲ್ಲ… ನೂರಾರು ಕುಟುಂಬಗಳ ಕಣ್ಣೀರಿಗೆ ಕಾರಣವಾದ ಸಾವಿನ ಹೆದ್ದಾರಿ. ಹುಬ್ಬಳ್ಳಿ-ಧಾರವಾಡ ನಡುವಿನ ಬೈಪಾಸ್ ರಸ್ತೆಯಲ್ಲಿ ಅಪಘಾತಗಳು ದಿನೇ ದಿನೇ ಹೆಚ್ಚುತ್ತಿದ್ದು, ಜನಸಾಮಾನ್ಯರು ಭಯದ ವಾತಾವರಣದಲ್ಲೇ ಸಂಚರಿಸುವಂತಾಗಿದೆ. 2018ರಿಂದ ಈವರೆಗೆ 600ಕ್ಕೂ ಹೆಚ್ಚು ಭೀಕರ ಅಪಘಾತಗಳು ಸಂಭವಿಸಿದ್ದು, ಹಲವಾರು ಅಮೂಲ್ಯ ಜೀವಗಳು ಬಲಿಯಾಗಿವೆ.
ಅಪಘಾತಗಳ ಸರಣಿ ಮುಂದುವರಿದಿದ್ದರೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಾತ್ರ ರಸ್ತೆ ಅಗಲೀಕರಣ ಕಾಮಗಾರಿಯಲ್ಲಿ ನಿರ್ಲಕ್ಷ್ಯ ತೋರಿದೆ ಎಂಬ ಆರೋಪ ಕೇಳಿಬರುತ್ತಿದೆ. ಅಲ್ಲಲ್ಲಿ ಕಾಮಗಾರಿ ಆರಂಭಿಸಿ ಅರ್ಧಕ್ಕೆ ಬಿಟ್ಟು ಹೋಗಿರುವ ಕಾರಣ ವಾಹನ ಸವಾರರು ಮತ್ತಷ್ಟು ಸಂಕಷ್ಟ ಅನುಭವಿಸುತ್ತಿದ್ದಾರೆ. ಕಾಮಗಾರಿ ವಿಳಂಬವೇ ಅಪಘಾತಗಳಿಗೆ ಪ್ರಮುಖ ಕಾರಣ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಿಂದ ವ್ಯಕ್ತವಾಗುತ್ತಿದೆ.
32 ಕಿಲೋಮೀಟರ್ ಉದ್ದದ ಈ ದ್ವಿಪಥ ರಸ್ತೆಯನ್ನು ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿಪಡಿಸಲು 2022ರಲ್ಲಿ ಸುಮಾರು 1200 ಕೋಟಿ ರೂಪಾಯಿ ವೆಚ್ಚದ ಯೋಜನೆಗೆ ಅನುಮೋದನೆ ನೀಡಲಾಗಿತ್ತು. ಆದರೆ ಮೂರು ವರ್ಷ ಕಳೆದರೂ ಕಾಮಗಾರಿ ಪೂರ್ಣಗೊಂಡಿಲ್ಲ. ಆಮೆಗತಿಯಲ್ಲಿ ಸಾಗುತ್ತಿರುವ ಕಾಮಗಾರಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚರಿಸುವ ಈ ಹೆದ್ದಾರಿಯಲ್ಲಿ ಸುರಕ್ಷತಾ ಕ್ರಮಗಳ ಕೊರತೆ, ಅಪೂರ್ಣ ಕಾಮಗಾರಿ ಹಾಗೂ ರಸ್ತೆ ಇಕ್ಕಟ್ಟಿನಿಂದ ಅಪಘಾತಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಕಾಮಗಾರಿ ಪೂರ್ಣಗೊಳ್ಳುವವರೆಗೂ ಜನರ ಜೀವದೊಂದಿಗೆ ಚೆಲ್ಲಾಟ ಮುಂದುವರಿಯುವ ಭೀತಿ ಕಾಡುತ್ತಿದೆ.
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೇರಿದಂತೆ ಹಲವು ಜನಪ್ರತಿನಿಧಿಗಳು ಕಾಮಗಾರಿ ವಿಳಂಬದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಲೋಕಾರ್ಪಣೆ ಮಾಡುವ ಕನಸು ಕಂಡಿರುವ ಯೋಜನೆ ಇದೀಗ ವಿಳಂಬದ ಕಾರಣ ಟೀಕೆಗೆ ಗುರಿಯಾಗಿದೆ.
ಒಟ್ಟಾರೆಯಾಗಿ, ಸಾವಿನ ಹೆದ್ದಾರಿ ಎಂಬ ಅಪಖ್ಯಾತಿಯಿಂದ ಹೊರಬರಬೇಕಾದ ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆ ಕಾಮಗಾರಿ ಇನ್ನೂ ಪೂರ್ಣಗೊಳ್ಳದಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಇನ್ನಾದರೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಎಚ್ಚೆತ್ತುಕೊಂಡು ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಸುರಕ್ಷಿತ ಸಂಚಾರದ ವ್ಯವಸ್ಥೆ ಕಲ್ಪಿಸಬೇಕಿದೆ.
ಕ್ಯಾಮೆರಾ ಪರ್ಸನ ಹೇಮಂತ್ ಜೊತೆ, ಸಂಗಮೇಶ್ ಸತ್ತಿಗೇರಿ, ಕರ್ನಾಟಕ ಟಿವಿ, ಹುಬ್ಬಳ್ಳಿ




