Hubli News: SIR ಪ್ರಕ್ರಿಯೆ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅಸಮಾಧಾನ

Hubli Political News: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ನಿಯಮಾನುಸಾರ ನಡೆಯುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಗಂಭೀರ ಆರೋಪ ಮಾಡಿದ್ದಾರೆ. ಮನೆ-ಮನೆಗೆ ತೆರಳಿ ಪರಿಶೀಲನೆ ನಡೆಸುವ ಬದಲು, ಕೆಲವೆಡೆ ಸಾಮೂಹಿಕವಾಗಿ ಫಾರ್ಮ್‌ಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಎಸ್‌ಐಆರ್ ಪ್ರಕ್ರಿಯೆಯ ಉದ್ದೇಶ ಮತದಾರರ ಪಟ್ಟಿಯನ್ನು ಸರಿಪಡಿಸುವುದೇ ಹೊರತು, ಯಾರ ಹೆಸರನ್ನೂ ಉದ್ದೇಶಪೂರ್ವಕವಾಗಿ ಸೇರಿಸುವುದು ಅಥವಾ ತೆಗೆದುಹಾಕುವುದು ಅಲ್ಲ ಎಂದು ಸ್ಪಷ್ಟಪಡಿಸಿದರು.

ಆದರೆ, ಹಲವೆಡೆ ಬಿಎಲ್‌ಒಗಳು ಮನೆ-ಮನೆಗೆ ತೆರಳುವ ಬದಲು ಸಮುದಾಯ ಭವನಗಳು, ಕಾರ್ಪೊರೇಟರ್ ಕಚೇರಿಗಳು ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಸಾಮೂಹಿಕವಾಗಿ ಎನ್ಯೂಮರೇಷನ್ ಫಾರ್ಮ್‌ಗಳನ್ನು ಭರ್ತಿ ಮಾಡುತ್ತಿದ್ದಾರೆ. ಕೆಲವೆಡೆ ವಾಟ್ಸಾಪ್ ಸಂದೇಶಗಳು ಹಾಗೂ ಧ್ವನಿವರ್ಧಕಗಳ ಮೂಲಕ ಸಾರ್ವಜನಿಕರನ್ನು ಒಂದೇ ಸ್ಥಳಕ್ಕೆ ಕರೆಸಿ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು ಆರೋಪಿಸಿದರು.

ಹುಬ್ಬಳ್ಳಿ ಹಾಗೂ ಶಿಗ್ಗಾವಿ-ಸವಣೂರು ಸೇರಿದಂತೆ ವಿವಿಧ ಕಡೆಗಳಲ್ಲಿ ನಡೆದಿರುವ ಇಂತಹ ಘಟನೆಗಳ ಬಗ್ಗೆ ಸಾಕ್ಷ್ಯಾಧಾರಗಳೊಂದಿಗೆ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಯನ್ನು ಬಿಜೆಪಿ ಸಂಸದರು ಹಾಗೂ ಮುಖಂಡರ ನಿಯೋಗ ಭೇಟಿ ಮಾಡಿ ದೂರು ಸಲ್ಲಿಸಲಿದೆ ಎಂದು ಜೋಶಿ ತಿಳಿಸಿದರು.

About The Author