ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ನೀಡಲಿಲ್ಲವೆಂಬ ಕಾರಣಕ್ಕೆ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೃತೆಯ ಸಂಬಂಧಿಕರು ಇದು ಆತ್ಮಹತ್ಯೆಯಲ್ಲ, ಕೊಲೆ ಇರಬಹುದೆಂದು ಅನುಮಾನ ವ್ಯಕ್ತಪಡಿಸಿದ್ದಾರೆ.
ನಗರದ ಸರಸ್ವತಿಪುರಂ ನಿವಾಸಿ, 46 ವರ್ಷದ ಸಂಧ್ಯಾ ಮೃತರು. ಮನೆಯಲ್ಲಿ ಇರುವ ಕೋಣೆಯ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಸಂಧ್ಯಾ ಪತ್ತೆಯಾಗಿದ್ದಾರೆ. ಮೂಲತಃ ಬೆಂಗಳೂರು ನಿವಾಸಿಯಾಗಿದ್ದ ಸಂಧ್ಯಾ, ಸುಮಾರು 25 ವರ್ಷಗಳ ಹಿಂದೆ ಚಾಮರಾಜನಗರ ಜಿಲ್ಲೆಯ ರಂಗನಾಥ್ ಅವರನ್ನು ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳು ಇದ್ದು, ಪುತ್ರಿ ವಿದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.
ಸಂಧ್ಯಾ ಗಂಡ ಹಾಗೂ ಮಗನೊಂದಿಗೆ ಮೈಸೂರಿನಲ್ಲಿ ವಾಸವಿದ್ದರು. ನಿನ್ನೆ ರಾತ್ರಿ ಪ್ರವಾಸದ ವಿಚಾರವಾಗಿ ಗಂಡ-ಹೆಂಡತಿ ನಡುವೆ ವಾಗ್ವಾದ ನಡೆದಿದೆ ಎಂದು ತಿಳಿದುಬಂದಿದೆ. ಜಗಳದ ಬಳಿಕ ಗಂಡ ಮನೆಯಿಂದ ಹೊರಗೆ ತೆರಳಿದ ನಂತರ ಈ ಘಟನೆ ನಡೆದಿದೆ ಎನ್ನಲಾಗಿದೆ.
ಇದೇ ವೇಳೆ, ಸಂಧ್ಯಾ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿರುವ ಸಹೋದರ ಗುರುಮೂರ್ತಿ, ಗಂಡ ಹಾಗೂ ಮಗನ ವಿರುದ್ಧ ದೂರು ನೀಡಿದ್ದಾರೆ. ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.




