ಕರ್ನಾಟಕದಲ್ಲಿ ಮೈಕೊರೆಯುವ ಚಳಿ – ಹವಾಮಾನ ಇಲಾಖೆ ಬಿಗ್ ಅಪ್‌ಡೇಟ್!

ಕರ್ನಾಟಕದಾದ್ಯಂತ ಈಗ ಚಳಿಯ ತೀವ್ರತೆ ದಿನೇ ದಿನೇ ಹೆಚ್ಚಾಗುತ್ತಿದೆ. ರಾಜ್ಯದೆಲ್ಲೆಡೆ ಒಣಹವೆ ಮುಂದುವರಿದಿದ್ದು, ಮುಂಜಾನೆ ಮತ್ತು ರಾತ್ರಿ ವೇಳೆ ಜನರು ಮೈಕೊರೆಯುವ ಚಳಿಗೆ ನಡುಗುವಂತಾಗಿದೆ. ವಿಶೇಷ ಅಂದ್ರೆ, ರಾಜ್ಯದ ಬಯಲು ಪ್ರದೇಶಗಳಲ್ಲೇ ಅತ್ಯಂತ ಕಡಿಮೆ ಕನಿಷ್ಠ ತಾಪಮಾನ ದಾವಣಗೆರೆಯಲ್ಲಿ ದಾಖಲಾಗಿದ್ದು, ಇಲ್ಲಿ ತಾಪಮಾನ 10.3 ಡಿಗ್ರಿ ಸೆಲ್ಸಿಯಸ್‌ಗೆ ಕುಸಿದಿದೆ.

ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಮುಂದಿನ ಎರಡು ದಿನಗಳ ಕಾಲ ಕನಿಷ್ಠ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆ ಇರುವುದಿಲ್ಲ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಕಲಬುರಗಿ, ರಾಯಚೂರು, ವಿಜಯಪುರ ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಇತ್ತ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಹಾಸನ, ಶಿವಮೊಗ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲೂ ಇದೇ ರೀತಿಯ ಒಣಹವೆ ಇರಲಿದೆ ಅಂತ ಹೇಳಲಾಗ್ತಿದೆ.

ಇನ್ನು ಸಿಲಿಕಾನ್ ಸಿಟಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲೂ ಒಣಹವೆ ಮುಂದುವರಿದಿದ್ದು, ರಾತ್ರಿ ಮತ್ತು ಮುಂಜಾನೆ ವೇಳೆ ಚಳಿಯ ಅನುಭವ ಮತ್ತಷ್ಟು ಹೆಚ್ಚಾಗಲಿದೆ. ಸದ್ಯಕ್ಕೆ ರಾಜ್ಯದಲ್ಲಿ ಮಳೆಯ ಲಕ್ಷಣಗಳಿಲ್ಲದಿದ್ದರೂ, ಎರಡು ದಿನಗಳ ಬಳಿಕ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಸ್ವಲ್ಪ ಏರಿಕೆಯಾಗುವ ಸಾಧ್ಯತೆಯಿದೆ.

ಚಳಿಯ ನಡುವೆಯೇ ಹವಾಮಾನ ಇಲಾಖೆ ಮತ್ತೊಂದು ಮುಖ್ಯ ಅಪ್‌ಡೇಟ್ ನೀಡಿದೆ ನೋಡಿ. ಅದೇನಂದ್ರೆ ನವೆಂಬರ್ 23ರಂದು ದಕ್ಷಿಣ ಒಳನಾಡಿನ ಒಂದೆರಡು ಕಡೆ ಗುಡುಗು ಸಹಿತ ಮಿಂಚು ಕಾಣಿಸಿಕೊಳ್ಳುವ ಸಾಧ್ಯತೆಯಿದೆಯಂತೆ! ಅಲ್ಲದೆ, ನವೆಂಬರ್ 24ರಿಂದ 26ರವರೆಗೆ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು ಮತ್ತು ಮಿಂಚು ಸಂಭವಿಸುವ ಮುನ್ಸೂಚನೆಯನ್ನೂ ನೀಡಲಾಗಿದೆ.

About The Author