Kashmir News: ಕಾಶ್ಮೀರದಲ್ಲಿ ಉಗ್ರರಿಂದ ಗುಂಡಿನ ದಾಳಿ: ರಾಜ್ಯದ ಸಂತ್ರಸ್ತರ ನೆರವಿಗೆ ನಿಂತಿದ್ದೇವೆ ಎಂದ ಸಿಎಂ

Kashmir News: ಕಾಶ್ಮೀರದಲ್ಲಿ ಉಗ್ರರು ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಸಾಾವನ್ನಪ್ಪಿದ್ದು, ರಾಜ್ಯದ ಪ್ರವಾಸಿಗರ ನೆರವಿಗೆ ನಾವಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕಾಶ್ಮೀರದಲ್ಲಿ ಕನ್ನಡಿಗರು ಉಗ್ರರ ದಾಳಿಗೆ ಗುರಿಯಾಗಿರುವ ಸುದ್ದಿ ತಿಳಿದ ತಕ್ಷಣ ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದುಕೊಂಡು, ತಕ್ಷಣ ಕಾರ್ಯಪ್ರವೃತ್ತರಾಗುವಂತೆ ಸೂಚನೆ ನೀಡಿದ್ದೇನೆ. ಪೊಲೀಸ್ ಅಧಿಕಾರಿಗಳನ್ನು ಒಳಗೊಂಡ ಅಧಿಕಾರಿಗಳ ಒಂದು ತಂಡ ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದೆ. ಮುಂದಿನ ಕ್ರಮಗಳ ಉಸ್ತುವಾರಿ ನೋಡಿಕೊಳ್ಳುವಂತೆ ದೆಹಲಿಯ ರೆಸಿಡೆಂಟ್ ಕಮಿಷನರ್ ಅವರಿಗೆ ಸೂಚನೆ ಕೂಡ ನೀಡಿದ್ದೇನೆ. ಇಡೀ ಘಟನೆಯ ಮೇಲೆ ನಾವು ತೀವ್ರನಿಗಾ ವಹಿಸಿದ್ದು, ದಾಳಿಯ ಸಂತ್ರಸ್ತರಾಗಿರುವ ನಮ್ಮವರ ನೆರವಿಗೆ ನಿಂತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಇನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಈ ಬಗ್ಗೆ ಟ್ವೀಟ್ ಮಾಡಿ, ಸಂತಾಪ ಸೂಚಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ಮನ ಬಂದಂತೆ ಗುಂಡಿನ ದಾಳಿ ನಡೆಸಿರುವ ವಿಚಾರ ತಿಳಿದು ಆಘಾತವಾಯಿತು. ಪ್ರವಾಸಿಗರ ಪೈಕಿ ಶಿವಮೊಗ್ಗ ಮೂಲದ ಓರ್ವ ಕನ್ನಡಿಗ ಮೃತಪಟ್ಟಿದ್ದು, ಅವರ ಮೃತದೇಹವನ್ನು ತರಲು ಸರ್ಕಾರದಿಂದ ಸಕಲ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ಕಾಶ್ಮೀರದಲ್ಲಿ ಸಿಲುಕಿರುವ ಪ್ರವಾಸಿ ಕನ್ನಡಿಗರನ್ನು ಸಂಪರ್ಕಿಸಿ, ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಈಗಾಗಲೇ ಪೊಲೀಸ್‌ ಅಧಿಕಾರಿಗಳ ತಂಡವೊಂದನ್ನು ಕಳುಹಿಸಲಾಗಿದೆ. ಮೃತರ ಕುಟುಂಬಕ್ಕೆ ತೀವ್ರ ಸಂತಾಪಗಳು ಎಂದು ಡಿಕೆಶಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.

About The Author