ಬೆಂಗಳೂರು: “ಯಾರನ್ನೂ ಅಗೌರವಿಸುವ ಉದ್ದೇಶ ನಮಗಿಲ್ಲ. ಒಕ್ಕಲಿಗ ಸಮುದಾಯದ ನಾಯಕರಾಗಿ ಎಸ್.ಎಂ ಕೃಷ್ಣ, ಸದಾನಂದ ಗೌಡರು, ದೇವೇಗೌಡರು, ಕುಮಾರಸ್ವಾಮಿ ಅವರು ಇದ್ದಾರೆ. ಪ್ರಾಧಿಕಾರದ ಅಧಿಕಾರಿಗಳು ಶಿಷ್ಟಾಚಾರವನ್ನು ಮಾತ್ರ ಗಮನದಲ್ಲಿಟ್ಟುಕೊಂಡು ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ವ್ಯಾಪ್ತಿಯ ಜನಪ್ರತಿನಿಧಿಗಳನ್ನು ಮಾತ್ರ ಆಹ್ವಾನ ನೀಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿದ್ದಾರೆ.
ಕೆಂಪೇಗೌಡರ ಜಯಂತಿಗೆ ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಆಹ್ವಾನ ನೀಡದ ವಿಚಾರವಾಗಿ ರಾಜ್ಯ ಒಕ್ಕಲಿಗರ ಸಂಘ ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕುಮಾರಸ್ವಾಮಿ ಮಂಡ್ಯಕ್ಕೆ ಹೋಗಿದ್ದು, ದೇವೇಗೌಡರು ಹಾಸನದ ಪ್ರತಿನಿಧಿಯಾಗಿದ್ದಾರೆ. ಈ ನಾಯಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಬೇಕಿತ್ತು. ಮುಂದಿನ ವರ್ಷ ಈ ರೀತಿಯ ತಪ್ಪುಗಳು ನಡೆಯದಂತೆ ಸರಿಪಡಿಸಲಾಗುವುದು ಎಂದರು.
ಒಕ್ಕಲಿಗ ಸಮುದಾಯದವರ ಜತೆಗೆ ಬೇರೆ ಸಮುದಾಯದ ಮುಖಂಡರು ಹಾಗೂ ಸ್ವಾಮೀಜಿಗಳನ್ನು ಆಹ್ವಾನಿಸುವಂತೆ ಸೂಚಿಸಲಾಗಿದೆ. ಕೆಂಪೇಗೌಡರು ಎಲ್ಲ ಸಮುದಾಯದವರಿಗೂ ಸೇರಿ ಬೆಂಗಳೂರನ್ನು ಕಟ್ಟಿದ್ದಾರೆ. ಹೀಗಾಗಿ ಎಲ್ಲ ಸಮುದಾಯದವರು ಕೆಂಪೇಗೌಡ ಜಂಯತಿ ಆಚರಣೆಯಲ್ಲಿ ಭಾಗಿಯಾಗಬೇಕು. ಇದರಲ್ಲಿ ರಾಜಕೀಯ ಮಾಡುವವರು ಮಾಡಲಿ” ಎಂದು ತಿಳಿಸಿದರು.
ರಾಜ್ಯದೆಲ್ಲೆಡೆ ಕೆಂಪೇಗೌಡರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲು ಕನ್ನಡ ಮತ್ತು ಸಂಸ್ಕತಿ ಇಲಾಖೆಯಿಂದ ನೀಡುವ 25 ಸಾವಿರದ ಜತೆಗೆ ಬಿಬಿಎಂಪಿಯಿಂದ 1 ಲಕ್ಷ ಅನುದಾನ ನೀಡಲಾಗುವುದು. ಕೆಂಪೇಗೌಡರು ಎಲ್ಲರ ಆಸ್ತಿ. ಒಂದು ಜಾತಿ ಹಾಗೂ ಧರ್ಮಕ್ಕೆ ಸೇರಿದವರಲ್ಲ. ಇವರ ಬಗ್ಗೆ ಹೆಚ್ಚಿನ ಪ್ರಚಾರ ಮಾಡಲು ನಮ್ಮ ಸರ್ಕಾರ ಮುಂದಾಗಿದೆ ಎಂದರು.