ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹದಿಂದಾಗಿ ಸಂಭವಿಸಿದ ಭಾರೀ ಬೆಳೆ ಹಾನಿಗೆ ತಕ್ಷಣ ಪರಿಹಾರ ನೀಡುವಂತೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆಯಲಾಗುವುದು ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಪ್ರವಾಹ ಪರಿಸ್ಥಿತಿ ವೀಕ್ಷಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಲವು ಸಚಿವರು ಶೀಘ್ರದಲ್ಲೇ ಕಲ್ಯಾಣ ಕರ್ನಾಟಕ ಭಾಗಕ್ಕೆ ಭೇಟಿ ನೀಡಲಿದ್ದಾರೆ. ಹೆಸರು, ಉದ್ದು, ತೊಗರಿ ಸೇರಿದಂತೆ ಅನೇಕ ಬೆಳೆಗಳಿಗೆ ಹಾನಿಯಾಗಿದೆ. ಬೆಳೆ ಹಾನಿ ವರದಿ ಬಂದ ಬಳಿಕ ಪರಿಹಾರಕ್ಕಾಗಿ ಮೋದಿಗೆ ಸವಿಸ್ತಾರವಾಗಿ ಪತ್ರ ಬರೆಯುತ್ತೇನೆ ಎಂದು ಖರ್ಗೆ ತಿಳಿಸಿದ್ದಾರೆ. ಸ್ಥಳ ಪರಿಶೀಲನೆ ನಡೆಸಿದ ಬಳಿಕ ರೈತರಿಗೆ ಸಹಾಯ ಮಾಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧರಿಸಲಿದ್ದಾರೆ. ಆದಷ್ಟು ಬೇಗ ಪರಿಹಾರ ನೀಡಬೇಕು ಎಂದು ನಾನು ಸಿಎಂಗೆ ಮನವಿ ಮಾಡುತ್ತೇನೆ ಎಂದು ಅವರು ಹೇಳಿದರು.
ಸಭೆಯೊಂದರಲ್ಲಿ ಮಾತನಾಡಿದ ಖರ್ಗೆ, ಬಿಜೆಪಿ ವಿರುದ್ಧ ಕಿಡಿಕಾರಿದರು. ಮತ ಕಳ್ಳತನ ಮಾಡಿದ ಬಳಿಕ ಈಗ ಅಧಿಕಾರ ಕಸಿದುಕೊಳ್ಳಲು ಕೇಂದ್ರ ಸರ್ಕಾರ ಹೊಸ ಕಾಯ್ದೆ ತರಲು ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇತ್ತೀಚೆಗೆ ಅಧಿವೇಶನದಲ್ಲಿ ಮಂಡಿಸಿದ ಮಂತ್ರಿಗಳು 30 ದಿನ ಜೈಲಿನಲ್ಲಿದ್ದರೆ ಅವರನ್ನು ವಜಾಗೊಳಿಸುವ ಮಸೂದೆಗೆ ಖರ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಈ ಕಾನೂನು ಜನತೆ ಆರಿಸಿರುವ ಸರ್ಕಾರವನ್ನು ಕೆಡವುವ ಹಕ್ಕನ್ನು ಕಸಿದುಕೊಳ್ಳುತ್ತದೆ. ಆ ಅಧಿಕಾರವನ್ನು ಇಡೀ, ಸಿಬಿಐ ಮೊದಲಾದ ಸಂಸ್ಥೆಗಳಿಗೆ ನೀಡುತ್ತದೆ. ಇದು ಪ್ರಜಾಪ್ರಭುತ್ವದ ಮೇಲೆ ಬುಲ್ಡೋಜರ್ ಓಡಿಸುವಂತಿದೆ ಎಂದು ವಾಗ್ದಾಳಿ ನಡೆಸಿದರು.
ವರದಿ: ರಂಜಿತ ರೇವಣ್ಣ ನಾಟನಹಳ್ಳಿ