ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದ ತಾಂತ್ರಿಕ ತೊಡಕುಗಳು ಇದೀಗ ಬಗೆಹರಿದಿದ್ದು, ಮಾರ್ಚ್ 6ರಂದು ಚುನಾವಣೆ ನಡೆಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಅಧಿಕೃತ ಪ್ರಕಟಣೆ ಮಾತ್ರ ಬಾಕಿ ಉಳಿದಿದೆ.
ಹೊಸದಾಗಿ ರಚನೆಯಾಗಿದ್ದ ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಚುನಾವಣೆ ಬಳಿಕವೇ ಕೆಎಂಎಫ್ ಅಧ್ಯಕ್ಷ ಚುನಾವಣೆ ನಡೆಸಬೇಕು ಎಂದು ನ್ಯಾಯಾಲಯ ಸೂಚಿಸಿದ್ದರಿಂದ ಪ್ರಕ್ರಿಯೆ ವಿಳಂಬವಾಗಿತ್ತು. ಇದೀಗ ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಎಲ್ಲಾ ತಾಂತ್ರಿಕ ಸಮಸ್ಯೆಗಳು ನಿವಾರಣೆಯಾಗಿವೆ.
ರಾಜ್ಯದಲ್ಲಿರುವ 16 ಹಾಲು ಒಕ್ಕೂಟಗಳ ಪೈಕಿ ಈಗಾಗಲೇ 15 ಒಕ್ಕೂಟಗಳಿಂದ ಪ್ರತಿನಿಧಿಗಳನ್ನು ಆಯ್ಕೆ ಮಾಡಿ ಕೆಎಂಎಫ್ಗೆ ಕಳುಹಿಸಲಾಗಿದೆ.ಮಾರ್ಚ್ 6ರಂದು ಅಧ್ಯಕ್ಷ ಚುನಾವಣೆ ನಡೆಸಲು ಪ್ರಾದೇಶಿಕ ಆಯುಕ್ತರು ಪ್ರಸ್ತಾವನೆ ಸಲ್ಲಿಸಿದ್ದು, ಮುಖ್ಯಮಂತ್ರಿ ಸೂಚನೆ ಹಿನ್ನೆಲೆಯಲ್ಲಿ ಈ ಪ್ರಸ್ತಾವನೆ ಸಲ್ಲಿಕೆಯಾಗಿದೆ ಎಂದು ಮೂಲಗಳು ತಿಳಿಸಿವೆ.
ಕೆಎಂಎಫ್ ಅಧ್ಯಕ್ಷ ಸ್ಥಾನದ ಸ್ಪರ್ಧೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಸಹೋದರ ಡಿ.ಕೆ. ಸುರೇಶ್, ಮಾಲೂರು ಶಾಸಕ ನಂಜೇಗೌಡ ಹಾಗೂ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಹೆಸರುಗಳು ಮುಂಚೂಣಿಯಲ್ಲಿವೆ. ಇತ್ತ ಅಪೆಕ್ಸ್ ಬ್ಯಾಂಕ್ ಚುನಾವಣೆ ಮುಂದೂಡಲ್ಪಟ್ಟಿರುವ ಹಿನ್ನೆಲೆಯಲ್ಲಿ, ಕೆಎಂಎಫ್ ಚುನಾವಣೆ ವೇಳೆಯಲ್ಲೇ ಅಪೆಕ್ಸ್ ಬ್ಯಾಂಕ್ ಚುನಾವಣೆ ಕೂಡ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
ವರದಿ : ಲಾವಣ್ಯ ಅನಿಗೋಳ




