Koppala News: ಕೆಪಿಎಸ್ ಮ್ಯಾಗ್ನೆಟ್ ಯೋಜನೆ ವಿರೋಧಿಸಿ ಬೃಹತ್ ಪ್ರತಿಭಟನೆ

Koppala News: ಕೊಪ್ಪಳ ಜಿಲ್ಲೆಯಲ್ಲಿ ಕೆಪಿಎಸ್ ಮ್ಯಾಗ್ನೆಟ್ ಯೋಜನೆ ವಿರೋಧಿಸಿ ಇಂದು ಬೃಹತ್ ಪ್ರತಿಭಟನೆ ನಡೆಯಿತು. AIDSO ಹಾಗೂ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಗ್ರಾಮಸ್ಥರು, ಪೋಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಕನಕದಾಸ ವೃತ್ತದಿಂದ ಅಶೋಕ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು,
“ನಮ್ಮೂರ ಶಾಲೆ ಉಳಿಸಿ”, “ಬಡ ಮಕ್ಕಳ ಶಿಕ್ಷಣ ಕಾಪಾಡಿ” ಎಂದು ಘೋಷಣೆ ಕೂಗಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯ ರಾಜ್ಯ ಅಧ್ಯಕ್ಷ ಅಲ್ಲಮ ಪ್ರಭು ಬೆಟ್ಟದೂರು ಅವರು, ಕೆಪಿಎಸ್ ಮ್ಯಾಗ್ನೆಟ್ ಯೋಜನೆಯಡಿ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸಿ ಮುಚ್ಚಲು ಸರ್ಕಾರ ಮುಂದಾಗಿದೆ. ಇದು ಗ್ರಾಮೀಣ ಬಡ ಮಕ್ಕಳ ಶಿಕ್ಷಣ ಹಕ್ಕಿನ ಮೇಲೆ ದಾಳಿ ಎಂದು ಆರೋಪಿಸಿದರು.

AIDSO ರಾಜ್ಯ ಮುಖಂಡ ಸಿಂಧೂ ಕೌದಿ ಮಾತನಾಡಿ, ಕೊಪ್ಪಳ ಜಿಲ್ಲೆಯ ನೂರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳು ವಿಲೀನದ ಹೆಸರಲ್ಲಿ ಮುಚ್ಚುವ ಅಪಾಯ ಎದುರಿಸುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು.

ಇನ್ನೊಂದೆಡೆ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ಜಿಲ್ಲಾ ಮುಖಂಡ ಶರಣು ಗಡ್ಡಿ ಮಾತನಾಡಿ,
ಗ್ರಾಮೀಣ ಭಾಗದ ಶಾಲೆಗಳನ್ನು ಮುಚ್ಚಿದರೆ ಬಡ ಹಾಗೂ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ದೊಡ್ಡ ಹೊಡೆತ ಬೀಳಲಿದೆ. ಶಾಲೆಗಳು ಉಳಿಯುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಸಿದರು.

ಪ್ರತಿಭಟನೆಗೆ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎ.ವಿ. ಕಣವಿ ಬೆಂಬಲ ಸೂಚಿಸಿದರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ DDPI ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮನವಿ ಪತ್ರ ಸ್ವೀಕರಿಸಿದರು. ಈ ಪ್ರತಿಭಟನೆಯಲ್ಲಿ ವಿವಿಧ ಗ್ರಾಮಗಳಿಂದ ಬಂದ ನೂರಾರು ಪೋಷಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

About The Author