Koppala News: ನೀಟ್ ಅಕ್ರಮ ಖಂಡಿಸಿ ಕೊಪ್ಪಳ ಜಿಲ್ಲೆ ಕುಷ್ಟಗಿಯಲ್ಲಿ ಬೃಹತ್ ಪ್ರತಿಭಟನೆ

Koppala News: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್–ಯುಜಿ 2026ರಲ್ಲಿ ನಡೆದಿರುವ ಅಕ್ರಮ, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ವಿದ್ಯಾರ್ಥಿಗಳ ಮೇಲಿನ ಅನ್ಯಾಯವನ್ನು ಖಂಡಿಸಿ ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ನೀಟ್ ಪರೀಕ್ಷೆಯನ್ನು ರದ್ದುಗೊಳಿಸಿ ಪಾರದರ್ಶಕ ಪರೀಕ್ಷಾ ವ್ಯವಸ್ಥೆ ಜಾರಿಗೆ ತರಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET-UG 2026)ಯಲ್ಲಿ ನಡೆದಿರುವ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅವ್ಯವಸ್ಥೆ ಹಾಗೂ ವಿದ್ಯಾರ್ಥಿಗಳ ಮೇಲಿನ ಅನ್ಯಾಯವನ್ನು ಖಂಡಿಸಿ ಪ್ರಗತಿಪರ ಹೋರಾಟ ಸಮಿತಿ ಹಾಗೂ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್‌ಐ) ನೇತೃತ್ವದಲ್ಲಿ ಕುಷ್ಟಗಿಯಲ್ಲಿ ಬೃಹತ್ ಪ್ರತಿಭಟನೆ ಮಾಡಲಾಯಿತು ಪ್ರತಿಭಟನೆಯಲ್ಲಿ ವಿವಿಧ ರೈತಕಾರ್ಮಿಕರು,ಮಹಿಳಾ, ಯುವ ಹಾಗೂ ಸಾಮಾಜಿಕ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಡಿವೈಎಫ್‌ಐ ರಾಜ್ಯ ಸಮಿತಿ ಸದಸ್ಯ ಅಮರೇಶ ಕಡಗದ, ನೀಟ್ ಪರೀಕ್ಷೆಯಲ್ಲಿನ ಅವ್ಯವಸ್ಥೆಯಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಸಂಕಷ್ಟಕ್ಕೆ ಸಿಲುಕಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA)ಯನ್ನು ರದ್ದುಪಡಿಸಿ ನ್ಯಾಯಸಮ್ಮತ ಹಾಗೂ ಪಾರದರ್ಶಕ ಪರೀಕ್ಷಾ ವ್ಯವಸ್ಥೆಯನ್ನು ಜಾರಿಗೆ ತರಬೇಕೆಂದು ಆಗ್ರಹಿಸಿದರು.

ಬಳಿಕ ರಾಷ್ಟ್ರಪತಿಗಳಿಗೆ ಉದ್ದೇಶಿಸಿ ಬರೆದ ಮನವಿ ಪತ್ರವನ್ನು ಕುಷ್ಟಗಿ ತಹಶೀಲ್ದಾರರ ಮೂಲಕ ಸಲ್ಲಿಸಲಾಯಿತು. ಇದೇ ವೇಳೆ ಶಿಕ್ಷಣ ಹೋರಾಟಗಾರ ಸೋನಂ ವಾಂಗ್ಚುಕ್ ವಿರುದ್ಧ ಕೈಗೊಂಡ ಕ್ರಮವನ್ನು ಪ್ರತಿಭಟನಾಕಾರರು ಖಂಡಿಸಿದರು. ಶಾಂತಿಯುತ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಹಾಗೂ ಅಶ್ರುವಾಯು ಪ್ರಯೋಗ ನಡೆಸಿರುವುದನ್ನು ವಿರೋಧಿಸಿ, ಪ್ರಜಾಸತ್ತಾತ್ಮಕ ಹಕ್ಕುಗಳನ್ನು ರಕ್ಷಿಸುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ, ಕರ್ನಾಟಕ ಕೃಷಿಕೂಲಿಕಾರ ಸಂಘ, ಹೈದರಾಬಾದ್ ಕರ್ನಾಟಕ ಯುವಸೇನಾ, ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

About The Author