Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಕೊಪ್ಪಳ ಜಿಲ್ಲೆಯ ಗಂಗಾವತಿ, ಕನಕಗಿರಿ ಹಾಗೂ ಕುಷ್ಟಗಿ ತಾಲೂಕುಗಳ ಗ್ರಾಮೀಣ ಪ್ರದೇಶಗಳಲ್ಲಿ ಪ್ರವಾಸ ಕೈಗೊಂಡು ಬೆಳೆಗಳ ಸ್ಥಿತಿಗತಿಗಳನ್ನು ಪರಿಶೀಲಿಸಿದರು.
ಪ್ರವಾಸದ ವೇಳೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಸಚಿವರು, ಮುಂಗಾರು ಹಂಗಾಮಿನ ಬೆಳೆಗಳ ಬೆಳವಣಿಗೆ, ಮಳೆ ಕೊರತೆಯಿಂದ ಉಂಟಾಗಿರುವ ಹಾನಿ ಹಾಗೂ ರೈತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಸ್ಥಳ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಆಗಸ್ಟ್ 6ರಂದು ಕೊಪ್ಪಳದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಜಿಲ್ಲೆಯ ಬರ ಪರಿಸ್ಥಿತಿಯ ಕುರಿತು ಸಮಗ್ರ ಪರಿಶೀಲನೆ ಮಾಡಲಾಗುವುದು ಎಂದು ತಿಳಿಸಿದರು. ಮುಖ್ಯಮಂತ್ರಿ ಅವರ ಸೂಚನೆಯಂತೆ ರಾಜ್ಯದ ಎಲ್ಲ ಸಚಿವರು ತಮ್ಮ ತಮ್ಮ ಜಿಲ್ಲೆಗಳಲ್ಲಿ ಬರ ವೀಕ್ಷಣೆ ನಡೆಸುತ್ತಿದ್ದು, ತಾವು ಕೂಡ ಜಿಲ್ಲೆಯಲ್ಲಿ ಇಂದು, ನಾಳೆ ಹಾಗೂ ನಾಡಿದ್ದು ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಮುಂಗಾರು ಬೆಳೆಗಳ ಪರಿಸ್ಥಿತಿಯನ್ನು ಅವಲೋಕಿಸುವುದಾಗಿ ಹೇಳಿದರು.
ಬೆಳೆ ಹಾನಿಗೆ ಸಂಬಂಧಿಸಿದಂತೆ ಸರ್ಕಾರದಿಂದ ಯಾವ ರೀತಿಯ ಪರಿಹಾರ ನೀಡಬೇಕೆಂಬುದನ್ನು ಪರಿಶೀಲಿಸಲಾಗುವುದು. ಈ ಕುರಿತು ಅಧಿಕಾರಿಗಳು ಕೈಗೊಂಡಿರುವ ಕ್ರಮಗಳ ಮಾಹಿತಿಯನ್ನೂ ಪಡೆದು ಪರಿಶೀಲಿಸಲಾಗುವುದು. ಬರ ಘೋಷಣೆಗೆ ಸಂಬಂಧಿಸಿದಂತೆ ಜಿಲ್ಲೆಯ ಯಾವುದೇ ತಾಲೂಕಿನ ರೈತರಿಗೆ ಅನ್ಯಾಯವಾಗದಂತೆ ಕ್ರಮವಹಿಸಲಾಗುವುದು. ಅಗತ್ಯ ವರದಿಯನ್ನು ಕಂದಾಯ ಇಲಾಖೆಗೆ ಸಲ್ಲಿಸಲಾಗುವುದು ಎಂದು ಸಚಿವರು ತಿಳಿಸಿದರು.
ಪರಿಶೀಲನಾ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ, ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ, ಕೊಪ್ಪಳ ಉಪ ವಿಭಾಗದ ಸಹಾಯಕ ಆಯುಕ್ತ ಮೆಹಬೂಬ ಜಿಲಾನಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.




