ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ ಆರಂಭಿಸಲಾಯಿತು.
ಹೋರಾಟದ ವೇಳೆ ಮಾತನಾಡಿದ ಎಬಿವಿಪಿ ಮುಖಂಡರು, ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕಾದರೆ ಅದನ್ನು ಸಿಬಿಐಗೆ ವಹಿಸುವುದು ಅಗತ್ಯ ಎಂದು ಒತ್ತಾಯಿಸಿದರು. ಜೊತೆಗೆ ಪರೀಕ್ಷಾ ವ್ಯವಸ್ಥೆಯಲ್ಲಿ ತಾಂತ್ರಿಕ ಸುಧಾರಣೆಗಳನ್ನು ಜಾರಿಗೊಳಿಸುವುದು, ಪರೀಕ್ಷಾ ಪ್ರಕ್ರಿಯೆಯನ್ನು ಇನ್ನಷ್ಟು ಪಾರದರ್ಶಕಗೊಳಿಸುವುದು ಹಾಗೂ ಪರೀಕ್ಷಾ ಸಂಬಂಧಿತ ಸಮಿತಿಗಳಲ್ಲಿ ಶಿಕ್ಷಣ ಕ್ಷೇತ್ರದ ಪರಿಣಿತರನ್ನೇ ಸದಸ್ಯರನ್ನಾಗಿ ನೇಮಕ ಮಾಡಬೇಕು ಎಂದು ಆಗ್ರಹಿಸಿದರು.
ಇದೇ ವಿಚಾರವಾಗಿ ಆಗಸ್ಟ್ 1ರಂದು ಪತ್ರಿಕಾಗೋಷ್ಠಿ ನಡೆಸಿ ಸರ್ಕಾರದ ಮುಂದೆ ಏಳು ಪ್ರಮುಖ ಬೇಡಿಕೆಗಳನ್ನು ಮಂಡಿಸಲಾಗಿತ್ತು. ಆಗಸ್ಟ್ 4ರವರೆಗೆ ಸರ್ಕಾರಕ್ಕೆ ಗಡುವು ನೀಡಿದ್ದರೂ ಯಾವುದೇ ಬೇಡಿಕೆಗೆ ಸ್ಪಂದಿಸಿಲ್ಲ ಎಂದು ಎಬಿವಿಪಿ ಆರೋಪಿಸಿದೆ.
ಇದಕ್ಕೂ ಮುನ್ನ ಜುಲೈ 30ರಂದು ಇದೇ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಎಬಿವಿಪಿ ಕಾರ್ಯಕರ್ತರು ಬೆಂಗಳೂರಿನ ಕೆಪಿಎಸ್‌ಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಈ ವೇಳೆ ಪೊಲೀಸರು ಮಧ್ಯಪ್ರವೇಶಿಸಿ ಹಲವು ಸಂಘಟನೆಯ ಮುಖಂಡರು ಹಾಗೂ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದರು.
ಆದರೂ ಸರ್ಕಾರದಿಂದ ಯಾವುದೇ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಇಂದು ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ ಆರಂಭಿಸಲಾಗಿದೆ ಎಂದು ಎಬಿವಿಪಿ ತಿಳಿಸಿದೆ.
ಸರ್ಕಾರ ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವವರೆಗೆ ಹಾಗೂ ವಿದ್ಯಾರ್ಥಿಗಳ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸುವವರೆಗೆ ಈ ಹೋರಾಟವನ್ನು ಹಿಂಪಡೆಯುವುದಿಲ್ಲ ಎಂದು ಎಬಿವಿಪಿ ನಾಯಕರು ಎಚ್ಚರಿಕೆ ನೀಡಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು ಮತ್ತು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿ, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.




