Political News: ಇಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ನಡೆಯುತ್ತಿರುವ ಹಲವು ಪ್ರಕರಣಗಳ ಬಗ್ಗೆ ಮಾತನಾಡಿದ್ದಾರೆ. ಹೆಸರಾಂತ ಸಾಹಿತಿ ಹಂ.ಪ.ನಾಗರಾಜಯ್ಯ ಅವರನ್ನು ಈ ಬಾರಿಯ ದಸರಾ ಉದ್ಘಾಟನೆಗೆ ಆಹ್ವಾನಿಸಲು ತೀರ್ಮಾನಿಸಲಾಗಿದೆ. ಜಿಲ್ಲಾಡಳಿತ, ಮೈಸೂರು ಉಸ್ತುವಾರಿ ಸಚಿವರು ಅವರಿಗೆ ಆಹ್ವಾನ ನೀಡಲಿದ್ದಾರೆ.
ಶಾಸಕ ಮುನಿರತ್ನ ಅವರ ಮೇಲೆ ಮೂರು ಪ್ರಕರಣಗಳು ದಾಖಲಾಗಿದ್ದು, ಅವುಗಳನ್ನು ಎಸ್.ಐ ಟಿಗೆ ವಹಿಸಬೇಕೆಂದು ಇಂದು ಒಕ್ಕಲಿಗ ಸಮುದಾಯದ ಸಚಿವರು ಹಾಗೂ ಶಾಸಕರು ಮನವಿ ಮಾಡಿದ್ದಾರೆ. ಈ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ್ ಅವರೊಂದಿಗೆ ಮಾತನಾಡಿ ತೀರ್ಮಾನಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮರು ಪರೀಕ್ಷೆಯನ್ನು ಆದಷ್ಟೂ ಶೀಘ್ರದಲ್ಲಿಯೇ ಏರ್ಪಡಿಸುವಂತೆ ಕೆ.ಪಿ.ಎಸ್.ಸಿ ಗೆ ಸೂಚಿಸಲಾಗಿದೆ. ಕಾನ್‌ಸ್ಟೆಬಲ್ ಹುದ್ದೆಗಳಿಗೆ ವಯೋಮಿತಿಯನ್ನು 27 ರಿಂದ 33 ವರ್ಷಕ್ಕೆ ಏರಿಸಬೇಕೆಂಬ ಬೇಡಿಕೆ ಇದ್ದು, ಒಂದು ಬಾರಿಯ ತೀರ್ಮಾನ ಕೈಗೊಳ್ಳುವಂತೆ ಗೃಹ ಸಚಿವರಿಗೆ ತಿಳಿಸಿದ್ದೇನೆ. ಈ ಬಾರಿ ರಾಜ್ಯದಲ್ಲಿ 60,000 ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಯಾಗಿತ್ತು. ದಾವಣಗೆರೆಯಲ್ಲಿ ಕಲ್ಲು ತೂರಾಟ ನಡೆದಿದ್ದು, ನಾಗಮಂಗಲದಲ್ಲಿ ಗಲಭೆ ನಡೆದಿದೆ. ಇಲ್ಲಿ ಪೊಲೀಸರ ಕರ್ತವ್ಯ ನಿರ್ಲಕ್ಷ್ಯ ಕಂಡುಬಂದಿದ್ದು, ಡಿ.ವೈ.ಎಸ್.ಪಿ ಅವರನ್ನು ಅಮಾನತು ಮಾಡಲಾಗಿದೆ. ಕೋಮು ಗಲಭೆಗಳಿಗೆ ಬಿಜೆಪಿ ಪ್ರಚೋದನೆ ನೀಡುತ್ತಿದೆ. ಸಮಾಜದ ಶಾಂತಿಗೆ ಭಂಗವುಂಟುಮಾಡುವುದು ಬಿಜೆಪಿಯ ಮುಖ್ಯ ಉದ್ದೇಶವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಯಡಿಯೂರಪ್ಪರವರ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣದಲ್ಲಿ ತನಿಖೆಗೆ ಆದೇಶವಾಗಿದೆ, ಆದರೆ 2021 ಲೋಕಾಯುಕ್ತದವರು ತನಿಖೆ ಮಾಡಿಲ್ಲ. ನಿನ್ನೆ ದಿನೇಶ್ ಗುಂಡೂರಾವ್, ಕೃಷ್ಣಬೈರೇಗೌಡ, ಸಂತೋಷ್ ಲಾಡ್ ಸೇರಿದಂತೆ ನಮ್ಮ ಸಚಿವರು ಈ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ಡಿನೋಟಿಫೈ ಪ್ರಕರಣದ ಜಮೀನು ಬಹಳ ಬೆಲೆಬಾಳುವಂಥದ್ದಾಗಿದ್ದು, ಕುಮಾರಸ್ವಾಮಿಯವರು ತಮ್ಮ ಸಂಬಂಧಿಕರಿಗೆ ಡಿನೋಟಿಫೈ ಮಾಡಿ, ಜಿಪಿಓ ಆಗಿದೆ. ಅಧಿಕಾರಿಗಳು ಈ ಕ್ರಮವನ್ನು ಕಾನೂನಾತ್ಮಕವಲ್ಲವೆಂದರೂ ಈ ರೀತಿ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ಪಡೆದು ಪರಿಶೀಲನೆ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ವಿಪಕ್ಷಗಳು ಗಾಜಿನ ಮನೆಯಲ್ಲಿ ಕುಳಿತು ಸರ್ಕಾರದ ಮೇಲೆ ಆರೋಪ ಹೊರಸುತ್ತಿವೆ. ನಾವು ಯಾರ ಮೇಲೆಯೂ ಆರೋಪ ಹೊರಿಸುವ ಕೆಲಸವನ್ನು ಮಾಡುತ್ತಿಲ್ಲ. ಕುಮಾರಸ್ವಾಮಿಯವರು ಹಿಟ್ ಎಂಡ್ ರನ್ ಗಿರಾಕಿ, ಅವರು ತಮ್ಮ ಯಾವ ಆರೋಪಕ್ಕೂ ತಾರ್ಕಿಕ ಅಂತ್ಯ ಕಾಣಿಸುವುದಿಲ್ಲ. ಕುಮಾರಸ್ವಾಮಿಯವರು ಕೇಂದ್ರ ಸಚಿವರಾಗಿದ್ದು, ಜವಾಬ್ದಾರಿಯುತವಾಗಿ ವರ್ತಿಸಬೇಕು. ವಿಷಯದ ಸತ್ಯಾಸತ್ಯತೆಯನ್ನು ಅರಿತು ಮಾತನಾಡಬೇಕು ಎಂದು ಸಿಎಂ ಹೇಳಿದರು.