ರಾಜ್ಯದಲ್ಲಿ ಲಘು ಮಳೆ ಮುನ್ಸೂಚನೆ : ಉತ್ತರ ಒಳನಾಡಿನಲ್ಲಿ ಒಣಹವೆ

ರಾಜ್ಯದ ಉತ್ತರ ಒಳನಾಡಿನಲ್ಲಿ ಒಣಹವೆಯ ವಾತಾವರಣ ಮುಂದುವರೆಯಲಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಪ್ರಕಟಿಸಿದೆ. ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ಆಕಾಶ ಕಂಡುಬರುವ ಸಾಧ್ಯತೆ ಇದೆ ಎಂದು ವರದಿ ತಿಳಿಸುತ್ತದೆ.

ಕರಾವಳಿ ಭಾಗದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ವ್ಯಕ್ತವಾಗಿದೆ. ಅದೇ ರೀತಿ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಲಘು ಮಳೆಯ ಮುನ್ಸೂಚನೆ ನೀಡಲಾಗಿದೆ.

ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಂಪೂರ್ಣ ಒಣಹವೆಯೇ ಆವರಿಸಲಿದೆ ಎಂದು ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಮಳೆಯ ಸಾಧ್ಯತೆ ಕಡಿಮೆಯೇ ಇದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣಕ್ಕೆ ಜೊತೆಯಾಗಿ ಪ್ರತಿ ಗಂಟೆಗೆ 14 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 27.4°C ಹಾಗೂ ಕನಿಷ್ಠ ತಾಪಮಾನ 18°C ಸುತ್ತಮುತ್ತ ದಾಖಲಾಗುವ ನಿರೀಕ್ಷೆ ಹವಾಮಾನ ಇಲಾಖೆ ವ್ಯಕ್ತಪಡಿಸಿದೆ.

ವರದಿ: ರಂಜಿತ ರೇವಣ್ಣ ನಾಟನಹಳ್ಳಿ

About The Author