ಮೈಸೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್ 23ರಂದು ಚುನಾವಣೆ ನಡೆಯಲಿದೆ. ಚುನಾವಣೆಯಲ್ಲಿ ಎಚ್.ಡಿ. ಕೋಟೆಯ ಕೆ.ಈರೇಗೌಡ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಸೂಚಿಸಿದ್ದಾರೆ.
ಸಚಿವರ ಅಧ್ಯಕ್ಷತೆಯಲ್ಲಿ ನಿರ್ದೇಶಕರ ಸಭೆ ನಡೆಸಲಾಗಿದೆ. ಅಧಿಕಾರ ಹಂಚಿಕೆ ಒಪ್ಪಂದದ ಪ್ರಕಾರ ಉಳಿದ ಅವಧಿಗೆ ಈರೇಗೌಡರಿಗೆ ಅಧ್ಯಕ್ಷ ಸ್ಥಾನ ಬಿಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. 2021ರ ಮಾರ್ಚ್ 3ರಂದು ನಡೆದ ಮೈಮುಲ್ ನಿರ್ದೇಶಕರ ಚುನಾವಣೆಯಲ್ಲಿ ಶಾಸಕ ಜಿ.ಟಿ. ದೇವೇಗೌಡರ ಬಣದ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು. ಬಳಿಕ ಮಾರ್ಚ್ 16ರಂದು ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ಪಿರಿಯಾಪಟ್ಟಣ ಶಾಸಕರಾಗಿದ್ದ ಕೆ. ಮಹದೇವ ಅವರ ಪುತ್ರ ಪಿ.ಎಂ. ಪ್ರಸನ್ನ ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಅವರು 2024ರ ಆಗಸ್ಟ್‌ನಲ್ಲಿ ರಾಜೀನಾಮೆ ನೀಡಿದ್ದರು.
ಅವರ ರಾಜೀನಾಮೆಯ ಬಳಿಕ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಆರ್. ಚೆಲುವರಾಜು ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಆ ವೇಳೆ ರೂಪಿಸಲಾಗಿದ್ದ ಅಧಿಕಾರ ಹಂಚಿಕೆ ಸೂತ್ರದಂತೆ ಈಗ ಚೆಲುವರಾಜು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತೆರವಾದ ಸ್ಥಾನಕ್ಕೆ ಇದೇ 23ರಂದು ಹೊಸ ಚುನಾವಣೆಯು ನಡೆಯಲಿದ್ದು, ಈರೇಗೌಡ ಅವರ ಆಯ್ಕೆಗೆ ಕಾಂಗ್ರೆಸ್ ಹಿರಿಯರು ಹಸಿರು ನಿಶಾನೆ ತೋರಿದ್ದಾರೆ.
ಈ ಹಿಂದೆ ನಡೆದ ಒಪ್ಪಂದದ ಪ್ರಕಾರ ಈರೇಗೌಡರಿಗೆ ಅವಕಾಶ ನೀಡಬೇಕು ಎಂದು ಪಕ್ಷದ ಹಿರಿಯ ನಾಯಕರಿಂದ ನಿರ್ದೇಶನ ಬಂದಿದ್ದು, ಅವರ ಅವಿರೋಧ ಆಯ್ಕೆ ಸಾಧ್ಯತೆ ಬಲವಾಗಿದೆ ಎಂದು ತಿಳಿದುಬಂದಿದೆ.
ವರದಿ: ರಂಜಿತ ರೇವಣ್ಣ ನಾಟನಹಳ್ಳಿ