ಕಾವೇರಿ ನೀರು ಹಾಗೂ ಮೇಕೆದಾಟು ಅಣೆಕಟ್ಟು ವಿಚಾರ ಮತ್ತೊಮ್ಮೆ ಕರ್ನಾಟಕ ಮತ್ತು ತಮಿಳುನಾಡು ನಡುವೆ ದೊಡ್ಡ ಮಟ್ಟದ ರಾಜಕೀಯ ಸಂಚಲನ ಸೃಷ್ಟಿಸಿದೆ! ಹೌದು, ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರದಿಂದ ಮತ್ತೊಮ್ಮೆ ತೀವ್ರ ವಿರೋಧ ವ್ಯಕ್ತವಾಗಿದೆ.
ವಿಷಯ ಏನಪ್ಪಾ ಅಂತಂದ್ರೆ, ತಮಿಳುನಾಡು ವಿಧಾನಸಭೆಯಲ್ಲಿ ಮಾತನಾಡಿದ ಜಲಸಂಪನ್ಮೂಲ ಸಚಿವ ಎನ್. ಆನಂದ್, ಕರ್ನಾಟಕದ ಪ್ರಸ್ತಾವಿತ ಮೇಕೆದಾಟು ಅಣೆಕಟ್ಟು ಯೋಜನೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಒಂದೇ ಒಂದು ಕಲ್ಲು ಇಡೋಕೂ ನಾವು ಬಿಡುವುದಿಲ್ಲ” ಎಂದು ಅವರು ವಿಧಾನಸಭೆಯಲ್ಲಿ ಸ್ಪಷ್ಟವಾಗಿ ಎಚ್ಚರಿಕೆ ನೀಡಿದ್ದಾರೆ. ವಿಪಕ್ಷಗಳ ಟೀಕೆಗಳಿಗೆ ಉತ್ತರಿಸುತ್ತಾ ಅವರು ಈ ಮಾತುಗಳನ್ನು ಆಡಿದ್ದಾರೆ ಎನ್ನಲಾಗ್ತಿದೆ.
ಅಂದಹಾಗೆ, ಕಾವೇರಿ ನದಿ ನೀರು ಹಂಚಿಕೆ ವಿವಾದ ದಶಕಗಳಷ್ಟು ಹಳೆಯದು ಎಂಬುದು ನಮ್ಗೆಲ್ಲಾ ಗೊತ್ತೇ ಇದೆ. ಮೇಕೆದಾಟು ಬ್ಯಾಲೆನ್ಸಿಂಗ್ ರಿಸರ್ವಾಯರ್ ಯೋಜನೆಯಿಂದ ತಮಗೆ ಹರಿದು ಬರುವ ನೀರಿನ ಪ್ರಮಾಣ ಕಡಿಮೆಯಾಗುತ್ತದೆ ಎಂಬುದು ತಮಿಳುನಾಡಿನ ಪ್ರಮುಖ ವಾದ. ಇತ್ತ ತಮಿಳುನಾಡು ವಿಧಾನಸಭೆಯಲ್ಲಿ ಈ ಬಗ್ಗೆ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆಯೂ ತೀವ್ರ ಮಾತಿನ ಚಕಮಕಿ ನಡೆದಿದ್ದು, ಕಾವೇರಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ಅಲ್ಲಿನ ಸರ್ಕಾರ ಸ್ಪಷ್ಟಪಡಿಸಿದೆ.
ಒಟ್ಟಿನಲ್ಲಿ, ಮೇಕೆದಾಟು ಅಣೆಕಟ್ಟು ಯೋಜನೆ ವಿಚಾರವಾಗಿ ಎರಡು ರಾಜ್ಯಗಳ ನಡುವಿನ ಈ ಜಟಾಪಟಿ ಮುಂದಿನ ದಿನಗಳಲ್ಲಿ ಯಾವ ರಾಜಕೀಯ ಸ್ವರೂಪ ಪಡೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕು. ಹಾಗೆ ಈ ಹೇಳಿಕೆಯನ್ನ ರಾಜ್ಯ ಹಾಗೂ ರಾಜಕೀಯ ವಲಯ ಹೇಗೆ ತೆಗೆದುಕೊಳ್ಳುತ್ತೆ ಅಂತ ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ..
